ವಿಜಯಸಾಕ್ಷಿ ಸುದ್ದಿ, ಗದಗ: ಈ ಬಾರಿ ಗಜಾನನೋತ್ಸವದ ಮೆರವಣಿಗೆಯಲ್ಲಿ ಡಿಜೆ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸಣ್ಣ ಪ್ರಮಾಣದ ಸ್ಪೀಕರ್ ಬಳಸಲು ಅವಕಾಶವಿದ್ದು, ದೊಡ್ಡ ಗಾತ್ರದ ಡಿಜೆಗಳಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಮಿಥುನ್ ಎಚ್.ಎನ್. ಸ್ಪಷ್ಟಪಡಿಸಿದರು.
ಗಜಾನನೋತ್ಸವದ ಹಿನ್ನೆಲೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿಯ ಆಡಿಟೋರಿಯಂ ಹಾಲ್ನಲ್ಲಿ ಮಂಗಳವಾರ ನಡೆದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಭೆಯಲ್ಲಿ 180ಕ್ಕೂ ಹೆಚ್ಚು ಗಜಾನನ ಮಂಡಳಿಗಳ ಪದಾಧಿಕಾರಿಗಳು, ಹಿಂದೂ–ಮುಸ್ಲಿಂ ಮುಖಂಡರು ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು.
ಡಿಜೆ ಬಳಕೆ ನಿಷೇಧದ ವಿಚಾರಕ್ಕೆ ಕೆಲವು ಹಿಂದೂ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದರು. ಡಿಜೆ ನಿಷೇಧಿಸುವುದಾದರೆ ದೇಶಾದ್ಯಂತ ಎಲ್ಲ ಧಾರ್ಮಿಕ ಕಾರ್ಯಕ್ರಮಗಳಲ್ಲೂ ಏಕರೂಪವಾಗಿ ನಿಷೇಧ ಜಾರಿಗೊಳಿಸಬೇಕು ಎಂದು ಮುಖಂಡರು ಒತ್ತಾಯಿಸಿದರು.
ಪ್ಲೆಕ್ಸ್ಗೂ ಅನುಮತಿ ಕಡ್ಡಾಯ
ಗಜಾನನೋತ್ಸವದ ಅಂಗವಾಗಿ ಪ್ಲೆಕ್ಸ್ ಅಳವಡಿಸುವವರು ಸಂಬಂಧಿಸಿದ ಇಲಾಖೆಯಿಂದ ಅನುಮತಿ ಪಡೆಯಬೇಕು. ಎಲ್ಲೆಂದರಲ್ಲಿ ಪ್ಲೆಕ್ಸ್ ಅಳವಡಿಸಿ ಸಾರ್ವಜನಿಕರಿಗೆ ತೊಂದರೆ ನೀಡಬಾರದು. ಕಾರ್ಯಕ್ರಮ ಮುಗಿದ ಬಳಿಕ ಪ್ಲೆಕ್ಸ್ಗಳನ್ನು ತೆರವುಗೊಳಿಸುವ ಜವಾಬ್ದಾರಿ ಆಯೋಜಕರದ್ದೇ ಎಂದು ಎಸ್ಪಿ ಸೂಚಿಸಿದರು.
ಗಜಾನನೋತ್ಸವ ಶಾಂತಿಯುತವಾಗಿ ನಡೆಯಲು ಎಲ್ಲ ಮಂಡಳಿಗಳು ಹಾಗೂ ಸಮುದಾಯಗಳ ಮುಖಂಡರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು. ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ದುರ್ಗೇಶ್, ಡಿವೈಎಸ್ಪಿ ಮುರ್ತುಜಾ ಖಾದ್ರಿ ಸೇರಿದಂತೆ ಪೊಲೀಸ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು, 180ಕ್ಕೂ ಹೆಚ್ಚು ಗಜಾನನ ಮಂಡಳಿಗಳ ಸದಸ್ಯರು ಹಾಗೂ ವಿವಿಧ ಸಮುದಾಯಗಳ ಮುಖಂಡರು ಉಪಸ್ಥಿತರಿದ್ದರು.



