HomeGadag Newsಸೆ.19ರಂದು ರಾಷ್ಟ್ರೀಯ ಲೋಕ ಅದಾಲತ್

ಸೆ.19ರಂದು ರಾಷ್ಟ್ರೀಯ ಲೋಕ ಅದಾಲತ್

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲೆಯಲ್ಲಿ ಸೆ.19ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದ್ದು, ನ್ಯಾಯಾಲಯಗಳಲ್ಲಿ ಬಾಕಿಯಿರುವ ವ್ಯಾಜ್ಯಗಳನ್ನು ರಾಜಿ ಸಂಧಾನದ ಮೂಲಕ ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ನಾಗವೇಣಿ ಕರೆ ನೀಡಿದರು.

ಗದಗ ನಗರದ ಜಿಲ್ಲಾ ನ್ಯಾಯಾಲಯದ ಕಾನ್ಫರೆನ್ಸ್ ಹಾಲ್‌ನಲ್ಲಿ ಬುಧವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್ ಕುರಿತು ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಲೋಕ ಅದಾಲತ್‌ನಲ್ಲಿ ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥವಾದರೆ, ನ್ಯಾಯಾಲಯಕ್ಕೆ ಪಾವತಿಸಿದ ಶುಲ್ಕವನ್ನು ಸಂಪೂರ್ಣವಾಗಿ ಮರುಪಾವತಿಸಲಾಗುತ್ತದೆ. ಅಲ್ಲದೆ, ರಾಜಿ ಮೂಲಕ ಪ್ರಕರಣ ಇತ್ಯರ್ಥಗೊಂಡ ಬಳಿಕ ಉಭಯ ಪಕ್ಷಗಾರರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದಿಲ್ಲ. ಇದರಿಂದ ಪ್ರಕರಣ ಶಾಶ್ವತವಾಗಿ ಮುಕ್ತಾಯಗೊಳ್ಳುವುದರೊಂದಿಗೆ ಸಮಯ ಹಾಗೂ ಆರ್ಥಿಕ ಹೊರೆಯನ್ನು ತಪ್ಪಿಸಿಕೊಳ್ಳಬಹುದು ಮತ್ತು ಉಭಯ ಪಕ್ಷಗಾರರು ತಮ್ಮ ಹಿಂದಿನ ಬಾಂಧವ್ಯ ಉಳಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ಗದಗ ಜಿಲ್ಲೆಯಲ್ಲಿ ಒಟ್ಟು 22,229 ವಿವಿಧ ಚಾಲ್ತಿ ಪ್ರಕರಣಗಳಿದ್ದು, ಅವುಗಳಲ್ಲಿ ರಾಜೀ ಮೂಲಕ ಇತ್ಯರ್ಥಪಡಿಸಬಹುದಾದ 4,090 ಪ್ರಕರಣಗಳನ್ನು ಈಗಾಗಲೇ ಗುರುತಿಸಲಾಗಿದೆ. ಸಿವಿಲ್ ದಾವೆಗಳು, ಜಮೀನು, ಮನೆ ಹಾಗೂ ನಿವೇಶನ ವ್ಯಾಜ್ಯಗಳು, ಭೂಸ್ವಾಧೀನ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ದರಖಾಸ್ತು ಅರ್ಜಿಗಳು, ಕಾರ್ಮಿಕ ಪ್ರಕರಣಗಳು, ಮರಳು ಕಳ್ಳಸಾಗಣೆ ಪ್ರಕರಣಗಳು, ಚೆಕ್‌ಬೌನ್ಸ್, ಮೋಟರ್ ವಾಹನ ಅಪಘಾತ, ವೈವಾಹಿಕ ಪ್ರಕರಣಗಳು ಹಾಗೂ ರಾಜೀಗೆ ಅರ್ಹವಾದ ಕ್ರಿಮಿನಲ್ ಕಂಪೌಂಡೆಬಲ್ ಪ್ರಕರಣಗಳು ಇದರಲ್ಲಿ ಸೇರಿವೆ.

ರಾಜಿಗಾಗಿ ಗುರುತಿಸಿರುವ ಪ್ರಕರಣಗಳ ಕುರಿತು ಸಂಬಂಧಪಟ್ಟ ವಕೀಲರು ಹಾಗೂ ಪಕ್ಷಗಾರರಿಗೆ ಮುಂಚಿತವಾಗಿ ಮಾಹಿತಿ ನೀಡಿ, ರಾಜೀ ಸಂಧಾನದಿಂದ ಆಗುವ ಪ್ರಯೋಜನಗಳ ಬಗ್ಗೆ ಮನವರಿಕೆ ಮಾಡಲಾಗುತ್ತಿದೆ. ಪ್ರಕರಣಗಳಿಗೆ ಸಂಬಂಧಿಸಿದ ವಕೀಲರು, ಕಕ್ಷಿದಾರರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸೆ.19ರಂದು ನಡೆಯುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಪಾಲ್ಗೊಂಡು ವ್ಯಾಜ್ಯಗಳನ್ನು ರಾಜೀ ಸಂಧಾನದ ಮೂಲಕ ಪರಿಹರಿಸಿಕೊಳ್ಳಬೇಕು ಎಂದು ಹೇಳಿದರು.

ಕಳೆದ ಜುಲೈನಲ್ಲಿ ನಡೆದ ಲೋಕ ಅದಾಲತ್‌ನಲ್ಲಿ 3,647 ಚಾಲ್ತಿ ಪ್ರಕರಣಗಳು ಹಾಗೂ 75,808 ವ್ಯಾಜ್ಯಪೂರ್ವ ಪ್ರಕರಣಗಳು ಸೇರಿದಂತೆ ಒಟ್ಟು 79,455 ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಲಾಗಿದೆ. ಇದರಲ್ಲಿ 11 ಕೌಟುಂಬಿಕ ಪ್ರಕರಣಗಳಲ್ಲಿ ದಂಪತಿಗಳನ್ನು ಪುನಃ ಒಂದುಗೂಡಿಸಿ ಕಳುಹಿಸಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಹಿರಿಯ ದಿವಾಣಿ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಮಡ್ಲೂರ ಉಪಸ್ಥಿತರಿದ್ದರು.

ರಾಜಿ ಸಂಧಾನದ ಮೂಲಕ ವ್ಯಾಜ್ಯಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಂಡು ಸಮಯ ಹಾಗೂ ಆರ್ಥಿಕ ಹೊರೆಯನ್ನು ತಪ್ಪಿಸಿಕೊಳ್ಳಲು ಲೋಕ ಅದಾಲತ್ ಉತ್ತಮ ಅವಕಾಶವಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು.

— ನಾಗವೇಣಿ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img