ವಿಜಯಸಾಕ್ಷಿ ಸುದ್ದಿ, ಮುಳಗುಂದ: ಗದಗ ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಗದಗ ತಾಲೂಕನ್ನು ಬರಪೀಡಿತ ಎಂದು ಘೋಷಿಸಿ, ರೈತರ ಸಂಕಷ್ಟಕ್ಕೆ ಸರ್ಕಾರ ತಕ್ಷಣ ಸ್ಪಂದಿಸಬೇಕು ಎಂದು ಆಗ್ರಹಿಸಿ ಮುಳಗುಂದ ಹಸಿರು ಸೇನೆ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಪಟ್ಟಣದ ಬಾಲಲೀಲಾ ಮಹಾಂತ ಶಿವಯೋಗಿಗಳ ಗವಿಮಠದಿಂದ ಕಂದಾಯ ಇಲಾಖೆವರೆಗೆ ಪಾದಯಾತ್ರೆ ನಡೆಸಿದ ರೈತರು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ ಕಂದಾಯ ಇಲಾಖೆ ಎದುರು ಪ್ರತಿಭಟನೆ ನಡೆಸಿ ತಹಸೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ ಅವರಿಗೆ ಮನವಿ ಸಲ್ಲಿಸಿದರು.
ಗದಗ ತಾಲೂಕನ್ನು ಸಂಪೂರ್ಣ ಬರಪೀಡಿತ ಎಂದು ಘೋಷಿಸಬೇಕು. ರೈತರಿಗೆ ಬೆಳೆ ವಿಮೆ ಪರಿಹಾರವನ್ನು ತ್ವರಿತವಾಗಿ ಬಿಡುಗಡೆ ಮಾಡಬೇಕು. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಹಾಗೂ ಜಾನುವಾರುಗಳಿಗೆ ಅಗತ್ಯ ಮೇವು ಒದಗಿಸಬೇಕು ಎಂದು ರೈತರು ಒತ್ತಾಯಿಸಿದರು. ಬೇಡಿಕೆ ಈಡೇರಿಸದಿದ್ದರೆ ರಸ್ತೆ ಬಂದ್ ಮಾಡಿ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.
ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಯ್ಯ ಕೊರವನವರ ಮಾತನಾಡಿ, ಗದಗ ಜಿಲ್ಲೆಯ ಎಲ್ಲ ತಾಲೂಕುಗಳ ಬರ ಪರಿಸ್ಥಿತಿಯ ಮಾಹಿತಿಯನ್ನು ಈಗಾಗಲೇ ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಬರ ಘೋಷಣೆಯಾಗುವ ಸಾಧ್ಯತೆ ಇದೆ ಎಂದರು.
ತಹಸೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ ಮನವಿ ಸ್ವೀಕರಿಸಿ, ಬರ ಪರಿಸ್ಥಿತಿ ಕುರಿತು ಸಮೀಕ್ಷೆ ನಡೆಸಿ ಮೇಲಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಶೀಘ್ರದಲ್ಲೇ ಬರಪೀಡಿತ ತಾಲೂಕು ಘೋಷಣೆಯಾಗುವ ನಿರೀಕ್ಷೆಯಿದೆ ಎಂದರು.
ಪ್ರತಿಭಟನೆಯಲ್ಲಿ ರೈತ ಸಂಘದ ಅಧ್ಯಕ್ಷ ದೇವಪ್ಪ ಅಣ್ಣಿಗೇರಿ, ಕಿರಣ ಕುಲಕರ್ಣಿ, ಬಸವರಾಜ ಕರಿಗಾರ, ದೇವರಾಜ ಸಂಗನಪೇಟಿ, ಮಹಾಂತೇಶ ಗುಂಜಳ, ಮುತ್ತಪ್ಪ ಪಲ್ಲೇದ, ಮುತ್ತಪ್ಪ ಬಳ್ಳಾರಿ, ಶಂಕ್ರಪ್ಪ ಹಿರೇಮಠ, ಲಕ್ಷ್ಮಣ ಹೊರಪೇಟಿ, ಮಹಾದೇವಪ್ಪ ಮಾನೇಗಾರ ಸೇರಿದಂತೆ ರೈತ ಸಂಘದ ಸದಸ್ಯರು ಪಾಲ್ಗೊಂಡಿದ್ದರು.
ಬರ ಪರಿಸ್ಥಿತಿ ಕುರಿತು ಈಗಾಗಲೇ ಸಮೀಕ್ಷೆ ನಡೆಸಲಾಗಿದ್ದು, ಮೇಲಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದೆ. ಸರ್ಕಾರದ ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳುವ ನಿರೀಕ್ಷೆಯಿದೆ.
— ಶ್ರೀನಿವಾಸಮೂರ್ತಿ ಕುಲಕರ್ಣಿ, ತಹಸೀಲ್ದಾರ್



