ವಿಜಯಸಾಕ್ಷಿ ಸುದ್ದಿ, ಮುಳಗುಂದ: ಗಣೇಶ ಹಬ್ಬವನ್ನು ಶಾಂತಿ ಹಾಗೂ ಸೌಹಾರ್ದತೆಯಿಂದ ಆಚರಿಸಬೇಕು. ಗಣೇಶ ವಿಸರ್ಜನೆ ಸೇರಿದಂತೆ ಹಬ್ಬದ ಸಂದರ್ಭದಲ್ಲಿ ಧ್ವನಿವರ್ಧಕ ಹಾಗೂ ಡಿಜೆ ಸೌಂಡ್ ಬಳಕೆಯನ್ನು ಕಾನೂನಿನಡಿ ನಿಷೇಧಿಸಲಾಗಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಗದಗ ಡಿವೈಎಸ್ಪಿ ಮುರ್ತುಜಾ ಖಾದ್ರಿ ಹೇಳಿದರು.
ಮುಳಗುಂದ ಪೊಲೀಸ್ ಠಾಣೆಯಲ್ಲಿ ನಡೆದ ಗಣೇಶ ಹಬ್ಬದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ಭಾರತೀಯ ಸಂಸ್ಕೃತಿಯಲ್ಲಿ ಹಬ್ಬ–ಹರಿದಿನಗಳನ್ನು ಶಾಂತಿ, ಸೌಹಾರ್ದತೆಯಿಂದ ಆಚರಿಸುವ ಪರಂಪರೆ ಇದೆ. ನಿಷೇಧದ ನಡುವೆಯೂ ಡಿಜೆ ಸೌಂಡ್ ಬಳಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ. ಸುಬ್ಬಾಪುರಮಠ ಮಾತನಾಡಿ, ಗಣೇಶ ಪ್ರತಿಷ್ಠಾಪನೆಗೆ ಸಂಬಂಧಿಸಿದಂತೆ ಪಪಂ, ವಿದ್ಯುತ್ ಪ್ರಸರಣಾ ಇಲಾಖೆ ಹಾಗೂ ಪೊಲೀಸ್ ಇಲಾಖೆಯಿಂದ ಅಗತ್ಯ ಪರವಾನಗಿ ಪಡೆಯಬೇಕು. ಪ್ರತಿಷ್ಠಾಪನಾ ಸ್ಥಳದಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವುದು ಕಡ್ಡಾಯವಾಗಿದ್ದು, ಸಂಘದವರು ಸ್ವಯಂಸೇವಕರನ್ನು ನೇಮಿಸಿ ಸುರಕ್ಷತೆಗೆ ಆದ್ಯತೆ ನೀಡಬೇಕು. ಪಪಂ ನಿಗದಿಪಡಿಸಿದ ಸ್ಥಳದಲ್ಲಿಯೇ ಗಣೇಶ ವಿಸರ್ಜನೆ ಮಾಡಬೇಕು ಎಂದರು.
ಕಾನೂನು ಎಲ್ಲರಿಗೂ ಒಂದೇ. ಹಬ್ಬದ ಸಂದರ್ಭದಲ್ಲಿ ಯಾವುದೇ ರೀತಿಯ ಗೊಂದಲಕ್ಕೆ ಅವಕಾಶ ನೀಡದೆ ಶಾಂತಿ ಮತ್ತು ಸೌಹಾರ್ದತೆ ಕಾಪಾಡಲು ಸಾರ್ವಜನಿಕರು ಸಹಕರಿಸಬೇಕು.
— ಮುರ್ತಾಜಾ ಖಾದ್ರಿ, ಡಿವೈಎಸ್ಪಿ
ಸಭೆಯಲ್ಲಿ ಪಿಎಸ್ಐ ಡಿ.ಎಂ. ಮುಲ್ಲಾ, ಪ್ರಕಾಶ ಕಣವಿ, ಅಶೋಕ ಹುಣಸಿಮರದ ಸೇರಿದಂತೆ ಹಲವರು ಉಪಸ್ಥಿತರಿದ್ದರು.



