ಬೆಂಗಳೂರು: ತಮ್ಮ ಹಾಗೂ ಕುಟುಂಬಸ್ಥರಿಗೆ ಸೇರಿದ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) ನಡೆಸಿದ ದಾಳಿ ಕುರಿತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ. ಸಂಸ್ಥೆಗಳ ವಾರ್ಷಿಕ ವಹಿವಾಟು ₹2,000 ಕೋಟಿಗೂ ಅಧಿಕವಾಗಿದ್ದು, ದಾಳಿಯಲ್ಲಿ ಸಿಕ್ಕಿದೆ ಎನ್ನಲಾದ ₹2 ಕೋಟಿ ನಮಗೆ ದೊಡ್ಡ ಮೊತ್ತವೇ ಅಲ್ಲ ಎಂದು ಹೇಳಿದ್ದಾರೆ.
ದಾಳಿ ಕುರಿತು ಸ್ಪಷ್ಟನೆ ನೀಡಿದ ಸತೀಶ್ ಜಾರಕಿಹೊಳಿ, ಪತ್ತೆಯಾಗಿದೆ ಎನ್ನಲಾಗಿರುವ ₹2 ಕೋಟಿ ಹಣ ನಮ್ಮದೇ. ಅದನ್ನು ಕಾನೂನುಬದ್ಧವಾಗಿ ಕ್ಲೈಮ್ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಆಫ್ರಿಕಾದಲ್ಲಿ ಮೈನಿಂಗ್ ಮತ್ತು ಟ್ರೇಡಿಂಗ್ ಕಂಪನಿ ಆರಂಭಿಸಲು ಯೋಜನೆ ರೂಪಿಸಲಾಗಿತ್ತು. ಆದರೆ ಈವರೆಗೆ ಯಾವುದೇ ಹೂಡಿಕೆ ಮಾಡಿಲ್ಲ. ಹೂಡಿಕೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಇದೇ ವಿದೇಶಿ ಹೂಡಿಕೆ ವಿಚಾರವನ್ನು ಮುಂದಿಟ್ಟುಕೊಂಡು ಇ.ಡಿ. ದಾಳಿ ನಡೆಸಿದೆ ಎಂದು ಸಚಿವರು ಹೇಳಿದ್ದಾರೆ.
ತಮ್ಮ ಮಗ ಮತ್ತು ಮಗಳ ಹೆಸರಿನಲ್ಲಿ ಕಂಪನಿ ಸ್ಥಾಪಿಸಿರುವುದು ನಿಜ. ಈ ಸಂಬಂಧ ಆದಾಯ ತೆರಿಗೆ ಇಲಾಖೆಗೆ ಈಗಾಗಲೇ ಅಗತ್ಯ ದಾಖಲೆಗಳನ್ನು ಸಲ್ಲಿಸಲಾಗಿದೆ. ಇ.ಡಿ. ಅಧಿಕಾರಿಗಳು ಕೇಳಿದರೂ ಎಲ್ಲ ದಾಖಲೆಗಳನ್ನು ಒದಗಿಸುವುದಾಗಿ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಇನ್ನು ಪ್ರಕರಣದಲ್ಲಿ ಜಾತಿ ವಿಚಾರವನ್ನು ಮುಂದಿಟ್ಟುಕೊಂಡು ಸಮರ್ಥನೆ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ತಪ್ಪು ಮಾಡಿದ್ದರೆ ಜಾತಿಯ ಹೆಸರನ್ನು ಹೇಳಲು ಸಾಧ್ಯವಿಲ್ಲ. ನಾವು ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ಇಡೀ ವಿಚಾರವನ್ನು ಕಾನೂನುಬದ್ಧವಾಗಿಯೇ ಎದುರಿಸುತ್ತೇವೆ ಎಂದು ಹೇಳಿದ್ದಾರೆ.
ಕೇಂದ್ರ ತನಿಖಾ ಸಂಸ್ಥೆಗಳ ಕಾರ್ಯವೈಖರಿ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ, ಕಳೆದ 10 ವರ್ಷಗಳಿಂದ ಕಾಂಗ್ರೆಸ್, ಆಮ್ ಆದ್ಮಿ ಪಾರ್ಟಿ, ಎನ್ಸಿಪಿ ಸೇರಿದಂತೆ ವಿರೋಧ ಪಕ್ಷಗಳ ನಾಯಕರನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಬಿಜೆಪಿ ನಾಯಕರ ಮೇಲೆ ಇಂತಹ ದಾಳಿಗಳು ಏಕೆ ನಡೆಯುತ್ತಿಲ್ಲ ಎಂದು ಪ್ರಶ್ನಿಸಿದ ಅವರು, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನೂ ಗುರಿಯಾಗಿಸಿಕೊಂಡು ತನಿಖಾ ಸಂಸ್ಥೆಗಳ ಕ್ರಮ ನಡೆದಿರುವ ಇತಿಹಾಸವಿದೆ ಎಂದು ಹೇಳಿದ್ದಾರೆ.
ರಾಜಕೀಯವಾಗಿ ನಮ್ಮನ್ನು ಕುಗ್ಗಿಸುವ ಉದ್ದೇಶದಿಂದ ಈ ದಾಳಿ ನಡೆದಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ, ಆದರೂ ಇ.ಡಿ. ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇವೆ. ನೋಟಿಸ್ ನೀಡಿದಾಗ ಕಾನೂನುಬದ್ಧವಾಗಿ ಉತ್ತರ ನೀಡುತ್ತೇವೆ ಎಂದು ತಿಳಿಸಿದ್ದಾರೆ.



