ನವದೆಹಲಿ: ದೆಹಲಿಯ ಭಾರತ ಮಂಟಪದಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಆತ್ಮೀಯವಾಗಿ ಸ್ವಾಗತಿಸಿದರು. ಈ ವೇಳೆ ಉಭಯ ನಾಯಕರು ಪರಸ್ಪರ ಭೇಟಿಯಾಗಿ ಮಾತುಕತೆ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿ ಹಾಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಡುವೆ ಉನ್ನತ ಮಟ್ಟದ ದ್ವಿಪಕ್ಷೀಯ ಸಭೆಯೂ ನಡೆಯಿತು. ಜಾಗತಿಕ ರಾಜಕೀಯ ಮತ್ತು ಆರ್ಥಿಕ ಬೆಳವಣಿಗೆಗಳ ನಡುವೆ ನಡೆದ ಈ ಭೇಟಿ ಭಾರತ-ರಷ್ಯಾ ನಡುವಿನ ದೀರ್ಘಕಾಲದ ರಾಜತಾಂತ್ರಿಕ ಹಾಗೂ ಕಾರ್ಯತಂತ್ರದ ಸಂಬಂಧಗಳಿಗೆ ಮತ್ತಷ್ಟು ಮಹತ್ವ ನೀಡಿದೆ.
ಭೇಟಿಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ತಮಿಳು ದಾರ್ಶನಿಕ ಸಂತ ತಿರುವಳ್ಳುವರ್ ಅವರ ಪ್ರಸಿದ್ಧ ಕೃತಿ ‘ತಿರುಕ್ಕುರಳ್’ನ ರಷ್ಯನ್ ಅನುವಾದದ ಪ್ರತಿಯನ್ನು ಪುಟಿನ್ ಅವರಿಗೆ ಉಡುಗೊರೆಯಾಗಿ ನೀಡಿದರು.
ಮಾನವೀಯ ಮೌಲ್ಯಗಳು, ರಾಜನೀತಿ ಹಾಗೂ ಸತ್ಯದಂತಹ ವಿಚಾರಗಳನ್ನು ಸಾರುವ ‘ತಿರುಕ್ಕುರಳ್’ ಭಾರತೀಯ ಸಾಹಿತ್ಯ ಪರಂಪರೆಯ ಪ್ರಮುಖ ಕೃತಿಗಳಲ್ಲಿ ಒಂದಾಗಿದೆ. ಈ ಕೃತಿಯ ರಷ್ಯನ್ ಅನುವಾದವನ್ನು ಪುಟಿನ್ ಅವರಿಗೆ ನೀಡುವ ಮೂಲಕ ಪ್ರಧಾನಿ ಮೋದಿ ಭಾರತೀಯ ಸಾಂಸ್ಕೃತಿಕ ಪರಂಪರೆಯನ್ನು ಜಾಗತಿಕ ವೇದಿಕೆಯಲ್ಲಿ ಪರಿಚಯಿಸಿದ್ದಾರೆ.
ಪ್ರಧಾನಿ ಮೋದಿ ಅವರ ಈ ನಡೆಗೆ ತಮಿಳುನಾಡು ಸೇರಿದಂತೆ ದೇಶದ ವಿವಿಧೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಮೋದಿ-ಪುಟಿನ್ ಭೇಟಿಯ ವೇಳೆ ಉಭಯ ದೇಶಗಳ ನಡುವಿನ ಸಂಬಂಧಗಳು ಹಾಗೂ ಪ್ರಮುಖ ಜಾಗತಿಕ ವಿಚಾರಗಳ ಕುರಿತು ಚರ್ಚೆ ನಡೆದಿರುವುದು ವಿಶೇಷ ಗಮನ ಸೆಳೆದಿದೆ.



