ವಿಜಯಸಾಕ್ಷಿ ಸುದ್ದಿ, ಬೆಟಗೇರಿ: ಗದಗ-ಬೆಟಗೇರಿ ನಗರೋತ್ಥಾನ ಹಂತ-3ರಡಿ ಹುಲಕೋಟಿ ಶಾಲೆಯ ಮುಂಭಾಗದಿಂದ ರಂಗಪ್ಪಜ್ಜನ ಮಠಕ್ಕೆ ಸಾಗುವ ರಸ್ತೆಯನ್ನು ಸುಮಾರು ಎಂಟು ವರ್ಷಗಳ ಹಿಂದೆ ಸಿ.ಸಿ. ರಸ್ತೆಯಾಗಿ ನಿರ್ಮಿಸಲಾಗಿತ್ತು. ಆದರೆ ಕಳಪೆ ಕಾಮಗಾರಿಯಿಂದಾಗಿ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಅಲ್ಲಲ್ಲಿ ಬೃಹದಾಕಾರದ ಗುಂಡಿಗಳು ಬಿದ್ದಿರುವುದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ಈ ರಸ್ತೆಯ ಕೆಳಭಾಗದಲ್ಲಿ ಒಳಚರಂಡಿ ಪೈಪ್‌ಲೈನ್‌ಗಳು ಸುಮಾರು 15ರಿಂದ 20 ಅಡಿ ಆಳದಲ್ಲಿದ್ದು, ರಸ್ತೆ ನಿರ್ಮಾಣ ಸಂದರ್ಭದಲ್ಲಿ ಈ ಭಾಗಗಳಲ್ಲಿ ಸಮರ್ಪಕವಾಗಿ ಮೆಟ್ಲಿಂಗ್ ಮಾಡದಿರುವುದೇ ರಸ್ತೆ ಮಧ್ಯದಲ್ಲಿ ದೊಡ್ಡ ಗುಂಡಿಗಳು ಬೀಳಲು ಕಾರಣವಾಗಿದೆ ಎಂದು ನಗರಸಭೆ ಸದಸ್ಯ ರಾಘವೇಂದ್ರ ಯಳವತ್ತಿ ಆರೋಪಿಸಿದ್ದಾರೆ.
ಈ ಮಾರ್ಗದಲ್ಲಿ ಹುಲಕೋಟಿ ಪ್ರೌಢ ಹಾಗೂ ಪ್ರಾಥಮಿಕ ಶಾಲೆ, ಐಟಿಐ ಕಾಲೇಜು, ಶರಣಬಸವೇಶ್ವರ ಪ್ರೌಢಶಾಲೆ, ಪ್ರಾಥಮಿಕ ಶಾಲೆ ಹಾಗೂ ಆರೋಗ್ಯ ಕೇಂದ್ರಗಳಿವೆ. ಪ್ರತಿನಿತ್ಯ ಶಾಲಾ ಬಸ್‌ಗಳು ಸೇರಿದಂತೆ ಸುಮಾರು 10ರಿಂದ 12 ವಾಹನಗಳು ಸಂಚರಿಸುತ್ತಿದ್ದು, ಗುಂಡಿಗಳಿಂದಾಗಿ ಲಘು ಅಪಘಾತಗಳು ಸಂಭವಿಸುತ್ತಿವೆ. ಅಲ್ಲದೆ ಶರಣಬಸವೇಶ್ವರ ನಗರ, ಬಸವನಗುಡಿ ಬಡಾವಣೆ, ಶಿವಾಜಿನಗರ, ಗಣೇಶನಗರ ಹಾಗೂ ಕಣಗಿನಹಾಳಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯೂ ಇದಾಗಿದೆ.
ರಸ್ತೆ ದುರಸ್ತಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಹಲವು ಬಾರಿ ಮೌಖಿಕವಾಗಿ ಹಾಗೂ ಲಿಖಿತವಾಗಿ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಯಳವತ್ತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿಗಳು, ಜಿಲ್ಲಾ ಯೋಜನಾ ನಿರ್ದೇಶಕರು ಹಾಗೂ ಗದಗ-ಬೆಟಗೇರಿ ನಗರಸಭೆಯ ಕಾರ್ಯಪಾಲಕ ಅಭಿಯಂತರರಿಗೆ ಛಾಯಾಚಿತ್ರ ಸಹಿತ ಮನವಿ ಸಲ್ಲಿಸಲಾಗಿದೆ. ಹಿಂದಿನ ಜಿಲ್ಲಾ ಉಸ್ತುವಾರಿ ಸಚಿವರು, ಹಾಲಿ ಶಾಸಕರು ಹಾಗೂ ಜಿಲ್ಲಾ ಅಹವಾಲು ಸ್ವೀಕಾರ ಸಂದರ್ಭದಲ್ಲಿಯೂ ಮನವಿ ನೀಡಲಾಗಿದೆ. ಇತ್ತೀಚೆಗೆ ಬರ ವೀಕ್ಷಣೆಗೆ ಆಗಮಿಸಿದ್ದ ಮುಖ್ಯಮಂತ್ರಿಗಳಿಗೂ ಈ ಕುರಿತು ಮಾಹಿತಿ ನೀಡಿ ಮನವಿ ಸಲ್ಲಿಸಲಾಗಿದೆ. ಆದರೂ ಜಿಲ್ಲಾ ಹಾಗೂ ಸ್ಥಳೀಯ ಮಟ್ಟದ ಅಧಿಕಾರಿಗಳು ಸ್ಥಳ ಪರಿಶೀಲನೆಗೆ ಆಗಮಿಸದಿರುವುದು ವಿಷಾದಕರ ಸಂಗತಿ ಎಂದು ಅವರು ತಿಳಿಸಿದ್ದಾರೆ.
ಹುಲಕೋಟಿ ಪ್ರೌಢಶಾಲೆಯ ಮುಂಭಾಗದ ಗುಂಡಿಗಳು ಇದೀಗ ಬೃಹದಾಕಾರವಾಗಿ ಮಾರ್ಪಟ್ಟಿದ್ದು, ನಿತ್ಯ ಅಪಘಾತದ ಆತಂಕ ಎದುರಾಗಿದೆ. ಇತ್ತೀಚೆಗೆ ಗುಂಡಿಯಿಂದಾಗಿ ಮೋಟಾರ್ ಸೈಕಲ್ ಸವಾರನೊಬ್ಬ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿರುವುದು ಸಮಸ್ಯೆಯ ಗಂಭೀರತೆಗೆ ಸಾಕ್ಷಿಯಾಗಿದೆ ಎಂದು ಯಳವತ್ತಿ ಹೇಳಿದ್ದಾರೆ.
ರಸ್ತೆ ಸಮಸ್ಯೆ ಮುಂದುವರಿದರೆ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಅಪಘಾತಗಳು ಸಂಭವಿಸುವ ಸಾಧ್ಯತೆಯಿದೆ. ನಿತ್ಯ ಸಂಚರಿಸುವ ಸವಾರರು ಜಿಲ್ಲಾಡಳಿತ ಹಾಗೂ ನಗರಸಭೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆದ್ದರಿಂದ ಜಿಲ್ಲಾಧಿಕಾರಿಗಳು ಹಾಗೂ ಪೌರಾಯುಕ್ತರು ಕೂಡಲೇ ರಸ್ತೆ ದುರಸ್ತಿ ಕಾಮಗಾರಿ ಕೈಗೊಂಡು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಇಲ್ಲದಿದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಗದಗ-ಬೆಟಗೇರಿ ನಗರಸಭೆಯ ಸದಸ್ಯ ರಾಘವೇಂದ್ರ ಯಳವತ್ತಿ ಎಚ್ಚರಿಕೆ ನೀಡಿದ್ದಾರೆ.



