ಗದಗ: ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗದಗ ಜಿಲ್ಲೆಯ ನರಗುಂದ ಪಟ್ಟಣ ಬಂದ್‌ಗೆ ರೈತ ಸಂಘಟನೆಗಳು ಕರೆ ನೀಡಿವೆ. ಬರ ಘೋಷಣೆ, ಬರ ಪರಿಹಾರ, ಬೆಳೆ ವಿಮೆ ಪರಿಹಾರ ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳ ರೈತರ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿ ನಡೆದ ಪ್ರತಿಭಟನೆಯಲ್ಲಿ ಹುಬ್ಬಳ್ಳಿ-ನರಗುಂದ-ವಿಜಯಪುರ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಾಯಿತು.
ಮಲಪ್ರಭಾ ಅಚ್ಚುಕಟ್ಟು ಪ್ರದೇಶ ವೇದಿಕೆ ಸೇರಿದಂತೆ ಜಿಲ್ಲೆಯ ಹಲವು ರೈತ ಸಂಘಟನೆಗಳು ಹಾಗೂ ವಿವಿಧ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ. ಬೆಳಗ್ಗೆಯಿಂದ ಬಸ್ ಸಂಚಾರ ಸ್ಥಗಿತಗೊಂಡಿದ್ದು, ಅಂಗಡಿ ಮುಂಗಟ್ಟುಗಳು ಹಾಗೂ ವ್ಯಾಪಾರ-ವಹಿವಾಟು ಬಂದ್ ಆಗಿವೆ. ಇದರಿಂದ ದೂರದ ಊರುಗಳಿಗೆ ತೆರಳಬೇಕಿದ್ದ ಪ್ರಯಾಣಿಕರು ಪರದಾಡುವಂತಾಯಿತು.
ಹೆದ್ದಾರಿ ಬಂದ್ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ ಕಲ್ಪಿಸಲಾಗಿದೆ. ಖಾಸಗಿ ವಾಹನಗಳ ಸಂಚಾರ, ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳು ಮಾತ್ರ ಎಂದಿನಂತೆ ಆರಂಭವಾಗಿವೆ.
ನರಗುಂದದ ಮುಖ್ಯ ರಸ್ತೆಯಲ್ಲಿ ವಾಹನ ತಡೆದು ಪ್ರತಿಭಟನೆ ನಡೆಸಿದ ರೈತರು, ಗದಗ ಜಿಲ್ಲೆಯ ಎಲ್ಲ ಏಳು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸುವಂತೆ ಒತ್ತಾಯಿಸಿದರು. ಬರ ಪರಿಸ್ಥಿತಿಯಿಂದ ಸಂಕಷ್ಟದಲ್ಲಿರುವ ರೈತರಿಗೆ ತಕ್ಷಣ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.
ಬೆಳೆ ವಿಮೆ ಪರಿಹಾರ ಬಿಡುಗಡೆ ಮಾಡಬೇಕು, ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ರೈತರ ಸಾಲ ಮನ್ನಾ ಮಾಡಬೇಕು ಹಾಗೂ ರೈತರ ಇತರ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ವಿವಿಧ ರೈತ ಸಂಘಟನೆಗಳು ಹಾಗೂ ಹಲವು ಸಂಘಟನೆಗಳ ಕಾರ್ಯಕರ್ತರು ಪಾಲ್ಗೊಂಡಿದ್ದರು.



