ವಿಜಯಸಾಕ್ಷಿ ಸುದ್ದಿ, ಗದಗ: ಗೌರಿ-ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸಲು ಯಾವುದೇ ಅಡ್ಡಿಯಿಲ್ಲ. ಡಿಜೆ ಬಳಕೆಗೆ ಸಂಪೂರ್ಣ ನಿಷೇಧ ಹೇರಲಾಗುವುದಿಲ್ಲ. ಆದರೆ ಸುಪ್ರೀಂ ಕೋರ್ಟ್ ಆದೇಶ ಹಾಗೂ ನಿಯಮಗಳ ಅನ್ವಯ ಮೆರವಣಿಗೆಯಲ್ಲಿ ಡಿಜೆ ಬಳಸಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಮಿಥುನ್ ಎಚ್.ಎನ್. ತಿಳಿಸಿದರು.
ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗದಗ ಜಿಲ್ಲೆಯಲ್ಲಿ 2,000ಕ್ಕೂ ಹೆಚ್ಚು ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ ಮೆರವಣಿಗೆ ನಡೆಯುವ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದರು.
ಹೆಚ್ಚುವರಿಯಾಗಿ ಮೂರು ಕೆಎಸ್‌ಆರ್‌ಪಿ ತುಕಡಿಗಳು, 450ಕ್ಕೂ ಹೆಚ್ಚು ಹೋಮ್‌ಗಾರ್ಡ್ ಸಿಬ್ಬಂದಿ, ನಾಲ್ವರು ಡಿವೈಎಸ್‌ಪಿ ಸೇರಿದಂತೆ 600ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಹಾಗೂ ವಿವಿಧ ಇಲಾಖೆಗಳ 30ಕ್ಕೂ ಹೆಚ್ಚು ವಾಹನಗಳನ್ನು ಬಂದೋಬಸ್ತ್‌ಗೆ ನಿಯೋಜಿಸಲಾಗುತ್ತಿದೆ. ಪ್ರತಿಷ್ಠಾಪನೆಗೆ ಅನುಕೂಲವಾಗುವಂತೆ ಏಕಗವಾಕ್ಷಿ ವ್ಯವಸ್ಥೆ ಮಾಡಲಾಗಿದೆ ಎಂದರು.
ಶಾಂತಿ ಸುವ್ಯವಸ್ಥೆ ಕಾಪಾಡಲು 150ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಹೆಚ್ಚುವರಿ ಡ್ರೋನ್ ಕ್ಯಾಮೆರಾಗಳನ್ನು ಖರೀದಿಸಲಾಗಿದೆ. ರಾತ್ರಿ ಗಸ್ತು ಹೆಚ್ಚಿಸಲಾಗಿದೆ. ಹೋಬಳಿ, ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಶಾಂತಿ ಸಭೆ ನಡೆಸಲಾಗಿದೆ. ಜಿಲ್ಲೆಯ 135 ಪುಂಡರನ್ನು ಗುರುತಿಸಿ ಅವರ ಚಲನವಲನಗಳ ಮೇಲೆ ನಿಗಾ ಇರಿಸಲಾಗಿದೆ ಎಂದು ಹೇಳಿದರು.
ಪ್ಲೆಕ್ಸ್, ಬ್ಯಾನರ್, ಪ್ರಿಂಟರ್ ಹಾಗೂ ಸೌಂಡ್ ಸಿಸ್ಟಂ ಮಾಲೀಕರ ಸಭೆ ನಡೆಸಲಾಗಿದೆ. ಸಾಮಾಜಿಕ ಜಾಲತಾಣಗಳ ಮೇಲೂ ನಿಗಾ ಇರಿಸಲಾಗಿದೆ. ಜೇಬುಗಳ್ಳತನ ತಡೆ, ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಗಣೇಶ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ವೇಳೆ ಕಾನೂನು ಪಾಲಿಸಿ ಇಲಾಖೆಯೊಂದಿಗೆ ಸಾರ್ವಜನಿಕರು ಸಹಕರಿಸಬೇಕು ಎಂದರು.
ಗಣೇಶ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಸಂದರ್ಭದಲ್ಲಿ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಜಿಲ್ಲೆಯಾದ್ಯಂತ 300ಕ್ಕೂ ಹೆಚ್ಚು ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಹೆಚ್ಚಿನ ನಿಗಾ ವಹಿಸಲಾಗುತ್ತಿದೆ. ಕಳೆದ ವರ್ಷ 120 ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಲಾಗಿತ್ತು ಎಂದು ತಿಳಿಸಿದರು.
ಹಬ್ಬದ ಸಂಭ್ರಮಕ್ಕೆ ಪೊಲೀಸ್ ಇಲಾಖೆ ವಿರೋಧಿಯಾಗಿಲ್ಲ. ಆದರೆ ಕಾನೂನು, ಶಾಂತಿ ಮತ್ತು ಸೌಹಾರ್ದ ಕಾಪಾಡುವುದು ಎಲ್ಲರ ಜವಾಬ್ದಾರಿ. ನಿಯಮ ಪಾಲಿಸಿ ಗಣೇಶೋತ್ಸವ ಆಚರಿಸುವ ಮೂಲಕ ಜಿಲ್ಲೆಗೆ ಮಾದರಿಯಾಗಬೇಕು.
— ಮಿಥುನ್ ಎಚ್.ಎನ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

