ಚಿಕ್ಕಬಳ್ಳಾಪುರ: ಜಿಲ್ಲಾ ಸಶಸ್ತ್ರ ಪೊಲೀಸ್ ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಪೇದೆಯೊಬ್ಬರು ಹಠಾತ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಚಿಂತಾಮಣಿ ನಗರದ ವೆಂಕಟಗಿರಿಕೋಟೆ ಕಾಲೋನಿ ನಿವಾಸಿ ಐರಾಜು (40) ಮೃತ ಪೊಲೀಸ್ ಪೇದೆ. ರಾತ್ರಿ ಕರ್ತವ್ಯ ಮುಗಿಸಿಕೊಂಡು ಚಿಂತಾಮಣಿಯಲ್ಲಿರುವ ತಮ್ಮ ಮನೆಗೆ ವಾಪಸ್ ಆಗಿದ್ದ ಐರಾಜು ಅವರಿಗೆ ಇಂದು ಮುಂಜಾನೆ ಸುಮಾರು 5.30ರ ವೇಳೆಗೆ ಹಠಾತ್ ಹೃದಯಾಘಾತ ಸಂಭವಿಸಿದೆ.
ತಕ್ಷಣ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತ ಐರಾಜು ಅವರು ಪತ್ನಿ ಹಾಗೂ ಮೂವರು ಗಂಡು ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಕರ್ತವ್ಯನಿಷ್ಠ ಪೊಲೀಸ್ ಪೇದೆಯ ಅಕಾಲಿಕ ನಿಧನಕ್ಕೆ ಜಿಲ್ಲಾ ಸಶಸ್ತ್ರ ಪೊಲೀಸ್ ಪಡೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ, ಚಿಂತಾಮಣಿ ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ. ಐರಾಜು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪೊಲೀಸ್ ಸಿಬ್ಬಂದಿ ಕಂಬನಿ ಮಿಡಿದಿದ್ದಾರೆ.



