ವಿಜಯನಗರ: ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಗಣೇಶ ಮೂರ್ತಿ ಸಾಗಿಸುತ್ತಿದ್ದ ವೇಳೆ ವಿದ್ಯುತ್ ಅವಘಡ ಸಂಭವಿಸಿ ಟ್ರ್ಯಾಕ್ಟರ್ ಕಾಲುವೆಗೆ ಉರುಳಿದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಅನಂತಶಯನಗುಡಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಗಣೇಶ ಮೂರ್ತಿಯನ್ನು ಟ್ರ್ಯಾಕ್ಟರ್ನಲ್ಲಿ ಕೊಂಡೊಯ್ಯುತ್ತಿದ್ದ ವೇಳೆ ಮೂರ್ತಿಯಲ್ಲಿದ್ದ ಬಿದಿರುಗಳು ಮಾರ್ಗಮಧ್ಯೆ ವಿದ್ಯುತ್ ಕಂಬದ ತಂತಿಗೆ ತಗುಲಿವೆ. ಇದರಿಂದ ಶಾರ್ಟ್ ಸರ್ಕ್ಯೂಟ್ ಉಂಟಾಗಿದ್ದು, ವಿದ್ಯುತ್ ಶಾಕ್ನಿಂದ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಗಣೇಶ ಮೂರ್ತಿ ಸಮೇತ ಕಾಲುವೆಗೆ ಉರುಳಿದೆ ಎನ್ನಲಾಗಿದೆ.
ಘಟನೆಯಲ್ಲಿ ಕಮಲಾಪುರ ಮೂಲದ ಹುಲುಗಪ್ಪ ಹಾಗೂ ದೀಪಕ್ ಎಂಬುವವರಿಗೆ ವಿದ್ಯುತ್ ಶಾಕ್ ಹೊಡೆದು ಗಾಯಗಳಾಗಿವೆ. ಅದೃಷ್ಟವಶಾತ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಾಯಾಳುಗಳನ್ನು ಕೂಡಲೇ ಹೊಸಪೇಟೆ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ಬಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನಾ ಸ್ಥಳಕ್ಕೆ ವಿಜಯನಗರ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾಹ್ನವಿ, ಹೊಸಪೇಟೆ ಡಿವೈಎಸ್ಪಿ ಮುರಳೀಧರ್ ಹಾಗೂ ಪೊಲೀಸ್ ಇನ್ಸ್ಪೆಕ್ಟರ್ಗಳಾದ ಹುಲುಗಪ್ಪ ಮತ್ತು ಗುರುರಾಜ್ ಕಟ್ಟಿಮನಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.



