ಮಡಿಕೇರಿ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕುಂಬಾರಗಡಿಗೆ ಗ್ರಾಮದಲ್ಲಿ ವೃದ್ಧ ದಂಪತಿ ಗುಂಡೇಟಿಗೆ ಬಲಿಯಾಗಿರುವ ಆಘಾತಕಾರಿ ಘಟನೆ ನಡೆದಿದೆ.
ಕನ್ನಿಕಂಡ ಕುಟುಂಬದ 74 ವರ್ಷದ ಸುಬ್ಬಯ್ಯ ಹಾಗೂ ಅವರ 72 ವರ್ಷದ ಪತ್ನಿ ಭೋಜಮ್ಮ ಮೃತರು ಎಂದು ಗುರುತಿಸಲಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಸುಬ್ಬಯ್ಯ ಅವರು ತಮ್ಮ ಪತ್ನಿ ಭೋಜಮ್ಮ ಅವರಿಗೆ ಗುಂಡು ಹಾರಿಸಿದ ಬಳಿಕ ತಾವೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದರೆ ಘಟನೆಗೆ ನಿಖರವಾಗಿ ಏನು ಕಾರಣ ಎಂಬುದು ಇನ್ನೂ ತಿಳಿದುಬಂದಿಲ್ಲ.
ವಿಷಯ ತಿಳಿಯುತ್ತಿದ್ದಂತೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದು ಮಣಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೋಮವಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ದಂಪತಿ ಸಾವಿಗೆ ಕಾರಣವೇನು ಹಾಗೂ ಘಟನೆ ನಡೆದ ಸಂದರ್ಭದ ಕುರಿತು ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.



