ಬೆಂಗಳೂರು: ಸಾಫ್ಟ್‌ವೇರ್ ಅಪ್‌ಗ್ರೇಡ್ ಹಿನ್ನೆಲೆಯಲ್ಲಿ ಬೆಸ್ಕಾಂ ವ್ಯಾಪ್ತಿಯ 20 ಪಟ್ಟಣಗಳಲ್ಲಿ ಆನ್‌ಲೈನ್ ಸೇವೆಗಳು ತಾತ್ಕಾಲಿಕವಾಗಿ ಲಭ್ಯವಿರುವುದಿಲ್ಲ.
ಸೆಪ್ಟೆಂಬರ್ 15ರ ಮಧ್ಯರಾತ್ರಿಯಿಂದ ಸೆಪ್ಟೆಂಬರ್ 17ರ ಮಧ್ಯರಾತ್ರಿವರೆಗೆ ಸೇವೆಗಳಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಇಂಟಿಗ್ರೇಟೆಡ್ ಪವರ್ ಡೆವಲಪ್‌ಮೆಂಟ್ ಸ್ಕೀಮ್ (IPDS) ಐಟಿ ಹಂತ-2 ಯೋಜನೆಯಡಿ 20 ಪಟ್ಟಣಗಳಲ್ಲಿ ಹೊಸ ಸಾಫ್ಟ್‌ವೇರ್ ಅಪ್ಲಿಕೇಶನ್ ಅಳವಡಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಬಳಕೆಯಲ್ಲಿರುವ TRM (Total Revenue Management) ಸಾಫ್ಟ್‌ವೇರ್ ಬದಲಾಯಿಸಿ, ಗ್ರಾಹಕರ ದತ್ತಾಂಶವನ್ನು ಹೊಸ ವ್ಯವಸ್ಥೆಗೆ ವರ್ಗಾಯಿಸುವ ಪ್ರಕ್ರಿಯೆ ನಡೆಯಲಿದೆ.
ಈ ಅವಧಿಯಲ್ಲಿ ಹೊಸ ವಿದ್ಯುತ್ ಸಂಪರ್ಕಕ್ಕೆ ಅರ್ಜಿ, ಹೆಸರು ಬದಲಾವಣೆ, ಲೋಡ್ ಹೆಚ್ಚಳಕ್ಕೆ ಮನವಿ ಹಾಗೂ ಆನ್‌ಲೈನ್ ವಿದ್ಯುತ್ ಬಿಲ್ ಪಾವತಿ ಸೇರಿದಂತೆ ಪ್ರಮುಖ ಆನ್‌ಲೈನ್ ಸೇವೆಗಳು ಲಭ್ಯವಿರುವುದಿಲ್ಲ.
ಬಾಗೇಪಲ್ಲಿ, ದೇವನಹಳ್ಳಿ, ಗುಡಿಬಂಡೆ, ಮಾಗಡಿ, ಮಾಲೂರು, ನೆಲಮಂಗಲ, ಶ್ರೀನಿವಾಸಪುರ, ವಿಜಯಪುರ, ಚನ್ನಗಿರಿ, ಚಿಕ್ಕನಾಯಕನಹಳ್ಳಿ, ಗುಬ್ಬಿ, ಹೊಳಲ್ಕೆರೆ, ಹೊನ್ನಾಳಿ, ಹೊಸದುರ್ಗ, ಜಗಳೂರು, ಕೊರಟಗೆರೆ, ಮಧುಗಿರಿ, ಮೊಳಕಾಲ್ಮೂರು, ಪಾವಗಡ ಹಾಗೂ ತುರುವೇಕೆರೆ ಪಟ್ಟಣಗಳಲ್ಲಿ ಈ ವ್ಯತ್ಯಯ ಇರಲಿದೆ.
ಆದರೆ ವಿದ್ಯುತ್‌ಗೆ ಸಂಬಂಧಿಸಿದ ತುರ್ತು ಸಮಸ್ಯೆಗಳಿಗಾಗಿ ಬೆಸ್ಕಾಂನ 24×7 ಸಹಾಯವಾಣಿ 1912ಕ್ಕೆ ಕರೆ ಮಾಡಬಹುದು ಎಂದು ತಿಳಿಸಲಾಗಿದೆ.



