ವಿಜಯಸಾಕ್ಷಿ ಸುದ್ದಿ, ನರಗುಂದ: ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಗ್ರಾಮ ಪಂಚಾಯಿತಿ ಸದಸ್ಯರಿಗೆ ಹೋಲಿಕೆ ಮಾಡಿ ಸಚಿವ ಎಚ್.ಸಿ. ಬಾಲಕೃಷ್ಣ ಅವರು ನೀಡಿರುವ ಹೇಳಿಕೆಯನ್ನು ತಾಲೂಕಿನ ಚಿಕ್ಕ ನರಗುಂದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮುತ್ತು ರಾಯರಡ್ಡಿ ತೀವ್ರವಾಗಿ ಖಂಡಿಸಿದ್ದಾರೆ.
ಕುಮಾರಸ್ವಾಮಿ ಅವರು ರಾಜ್ಯದ ಮಾಜಿ ಮುಖ್ಯಮಂತ್ರಿಯಾಗಿ ಹಾಗೂ ಪ್ರಸ್ತುತ ಕೇಂದ್ರ ಸಚಿವರಾಗಿ ಸಾರ್ವಜನಿಕ ಜೀವನದಲ್ಲಿ ಮಹತ್ವದ ಜವಾಬ್ದಾರಿ ಹೊಂದಿದ್ದಾರೆ. ಅಂತಹ ವ್ಯಕ್ತಿಯನ್ನು ಗ್ರಾಮ ಪಂಚಾಯಿತಿ ಸದಸ್ಯರಿಗೆ ಹೋಲಿಕೆ ಮಾಡುವುದು ಅವರ ಸ್ಥಾನಮಾನಕ್ಕೆ ಅಗೌರವ ತೋರಿದಂತಾಗಿದೆ ಎಂದು ಮುತ್ತು ರಾಯರಡ್ಡಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳು, ಆರೋಪ-ಪ್ರತ್ಯಾರೋಪಗಳು ಸಹಜ. ಆದರೆ ಟೀಕಿಸುವ ಭರದಲ್ಲಿ ವ್ಯಕ್ತಿಯ ಸ್ಥಾನಮಾನವನ್ನು ಹಗುರವಾಗಿ ಕಾಣುವ ರೀತಿಯಲ್ಲಿ ಮಾತನಾಡುವುದು ಸರಿಯಲ್ಲ. ಸಚಿವ ಬಾಲಕೃಷ್ಣ ಅವರು ತಮ್ಮ ಹೇಳಿಕೆಯನ್ನು ಹಿಂಪಡೆದು, ಕುಮಾರಸ್ವಾಮಿ ಅವರ ಬಗ್ಗೆ ಗೌರವಯುತವಾಗಿ ಮಾತನಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಕುಮಾರಸ್ವಾಮಿ ಅವರು ಗ್ರಾಮ ಪಂಚಾಯಿತಿ ಸದಸ್ಯರಲ್ಲ, ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರು. ಅವರನ್ನು ಗ್ರಾಮ ಪಂಚಾಯಿತಿ ಸದಸ್ಯರಿಗೆ ಹೋಲಿಕೆ ಮಾಡಿರುವುದು ಖಂಡನೀಯ. ರಾಜಕೀಯ ಟೀಕೆಗಳಿಗೆ ಮಿತಿಯಿರಬೇಕು. ವೈಯಕ್ತಿಕವಾಗಿ ಅಥವಾ ಸ್ಥಾನಮಾನವನ್ನು ಹಗುರಗೊಳಿಸುವ ರೀತಿಯಲ್ಲಿ ಮಾತನಾಡುವುದು ರಾಜಕೀಯ ಸಂಸ್ಕೃತಿಯಲ್ಲ ಎಂದು ಮುತ್ತು ರಾಯರಡ್ಡಿ ತಿಳಿಸಿದ್ದಾರೆ.
ಕುಮಾರಸ್ವಾಮಿ ಅವರ ರಾಜಕೀಯ ಹೇಳಿಕೆಗಳಿಗೆ ಸಚಿವ ಬಾಲಕೃಷ್ಣ ಅವರು ವಿಚಾರಾಧಾರಿತವಾಗಿ ಉತ್ತರಿಸಲಿ. ಆದರೆ ಕೇಂದ್ರ ಸಚಿವರ ಸ್ಥಾನಮಾನವನ್ನು ಕಡೆಗಣಿಸಿ ಗ್ರಾಮ ಪಂಚಾಯಿತಿ ಸದಸ್ಯರಿಗೆ ಹೋಲಿಕೆ ಮಾಡಿರುವುದು ಸರಿಯಾದ ನಡೆಯಲ್ಲ. ಸಾರ್ವಜನಿಕ ಜೀವನದಲ್ಲಿರುವವರು ಪರಸ್ಪರರ ಸ್ಥಾನಮಾನಕ್ಕೆ ಗೌರವ ನೀಡುವ ಮೂಲಕ ಆರೋಗ್ಯಕರ ರಾಜಕೀಯ ಸಂಸ್ಕೃತಿ ಬೆಳೆಸಬೇಕು ಎಂದು ಮುತ್ತು ರಾಯರಡ್ಡಿ ಹೇಳಿದ್ದಾರೆ.



