ಬೆಂಗಳೂರು: ರಾಜ್ಯದ ಪಡಿತರ ಕಾರ್ಡ್ದಾರರಿಗೆ ಸರ್ಕಾರ ಮಹತ್ವದ ಮಾಹಿತಿ ನೀಡಿದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಎದುರಾಗುತ್ತಿರುವ ಸರ್ವರ್ ಸಮಸ್ಯೆಯಿಂದ ಇ-ಕೆವೈಸಿ ಪೂರ್ಣಗೊಳಿಸಲು ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಪಡಿತರ ಚೀಟಿ ಇ-ಕೆವೈಸಿ ಗಡುವನ್ನು ವಿಸ್ತರಿಸಲಾಗಿದೆ.
ಈ ಹಿಂದೆ ಸೆಪ್ಟೆಂಬರ್ 30ರವರೆಗೆ ಇ-ಕೆವೈಸಿ ಪೂರ್ಣಗೊಳಿಸಲು ಅವಕಾಶ ನೀಡಲಾಗಿತ್ತು. ಇದೀಗ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಗಡುವನ್ನು ಅಕ್ಟೋಬರ್ 20ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ. ರಾಜ್ಯದ ಎಪಿಎಲ್ ಮತ್ತು ಬಿಪಿಎಲ್ ಪಡಿತರ ಚೀಟಿದಾರರು ಈ ಅವಧಿಯೊಳಗೆ ಇ-ಕೆವೈಸಿ ಪೂರ್ಣಗೊಳಿಸಬಹುದಾಗಿದೆ.
ಸರ್ವರ್ ಸಮಸ್ಯೆಯಿಂದ ಸಾರ್ವಜನಿಕರಿಗೆ ತೊಂದರೆ
ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್ ಸಮಸ್ಯೆ ಉಂಟಾಗುತ್ತಿರುವುದರಿಂದ ಇ-ಕೆವೈಸಿ ಮಾಡಿಸಲು ಸಾರ್ವಜನಿಕರು ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲುವಂತಾಗಿತ್ತು. ಈ ಸಮಸ್ಯೆಯನ್ನು ನ್ಯಾಯಬೆಲೆ ಅಂಗಡಿ ಮಾಲೀಕರು ಸರ್ಕಾರದ ಗಮನಕ್ಕೆ ತಂದಿದ್ದರು.
ಈ ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಮಸ್ಯೆಯನ್ನು ಪರಿಗಣಿಸಿ ಇ-ಕೆವೈಸಿ ಗಡುವನ್ನು ವಿಸ್ತರಿಸಿದೆ. ಹೀಗಾಗಿ ಸರ್ವರ್ ಸಮಸ್ಯೆಯಿಂದ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಸರ್ಕಾರ ತಿಳಿಸಿದೆ.
ಅಕ್ಟೋಬರ್ 20ರವರೆಗೆ ಇ-ಕೆವೈಸಿ ಅವಕಾಶ
ಈ ಕುರಿತು ಸಚಿವ ರಿಜ್ವಾನ್ ಅರ್ಷದ್ ಅವರು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದು, ಇ-ಕೆವೈಸಿ ಪೂರ್ಣಗೊಳಿಸಲು ಅಕ್ಟೋಬರ್ 20ರವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಸರ್ವರ್ ಸಮಸ್ಯೆಯಿಂದ ಯಾರೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ನಿಗದಿಪಡಿಸಿರುವ ವಿಸ್ತರಿತ ಗಡುವಿನೊಳಗೆ ಇ-ಕೆವೈಸಿ ಪೂರ್ಣಗೊಳಿಸಿ ಸರ್ಕಾರದ ಸೌಲಭ್ಯಗಳನ್ನು ಪಡೆಯುವಂತೆ ಸಚಿವರು ಮನವಿ ಮಾಡಿದ್ದಾರೆ.
ನ್ಯಾಯಬೆಲೆ ಅಂಗಡಿಗಳ ಸಮಯ ಪರಿಷ್ಕರಣೆ
ಇದರ ಜೊತೆಗೆ ಬಡವರು ಹಾಗೂ ದಿನಗೂಲಿ ಕಾರ್ಮಿಕರ ಹಿತದೃಷ್ಟಿಯಿಂದ ನ್ಯಾಯಬೆಲೆ ಅಂಗಡಿಗಳ ಕಾರ್ಯನಿರ್ವಹಣೆಯ ಸಮಯದಲ್ಲೂ ಬದಲಾವಣೆ ಮಾಡಲಾಗಿದೆ.
ಅಕ್ಟೋಬರ್ 1ರಿಂದ ಜಾರಿಗೆ ಬರುವಂತೆ ನ್ಯಾಯಬೆಲೆ ಅಂಗಡಿಗಳ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ. ಹೊಸ ವೇಳಾಪಟ್ಟಿಯಂತೆ ನ್ಯಾಯಬೆಲೆ ಅಂಗಡಿಗಳು ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಹಾಗೂ ಸಂಜೆ 4 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಕಾರ್ಯನಿರ್ವಹಿಸಲಿವೆ.
ದಿನಗೂಲಿ ಕಾರ್ಮಿಕರು ತಮ್ಮ ಕೆಲಸಕ್ಕೆ ತೊಂದರೆಯಾಗದಂತೆ ಪಡಿತರ ಪಡೆಯಲು ಅನುಕೂಲವಾಗುವ ಉದ್ದೇಶದಿಂದ ಈ ಸಮಯ ಬದಲಾವಣೆ ಮಾಡಲಾಗಿದೆ ಎಂದು ಇಲಾಖೆ ತಿಳಿಸಿದೆ.



