ಬೆಂಗಳೂರು: ನಗರದ ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿ ಇಂದು ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ.
ಇಲ್ಲಿನ ಎಂಬಿ ಜ್ಯೂವೆಲ್ಲರ್ಸ್ ಎಂಬ ಫ್ಯಾನ್ಸಿ ಸ್ಟೋರ್ನಲ್ಲಿ ಬೆಳಗ್ಗೆ ಸುಮಾರು 7.10ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ.
ಅಂಗಡಿಯೊಳಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಘಟನೆಗೆ ನಿಖರ ಕಾರಣ ಹಾಗೂ ಉಂಟಾಗಿರುವ ನಷ್ಟದ ಪ್ರಮಾಣದ ಬಗ್ಗೆ ಪರಿಶೀಲನೆ ನಡೆಯುತ್ತಿದೆ.
ಅಗ್ನಿ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ತ್ವರಿತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.



