ಬೆಂಗಳೂರು: ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರಿಂದ ಹೆಚ್ಚುವರಿ ದರ ವಸೂಲಿ ಸೇರಿದಂತೆ ವಿವಿಧ ನಿಯಮ ಉಲ್ಲಂಘನೆ ಮಾಡಿದ ಖಾಸಗಿ ಬಸ್ಗಳ ವಿರುದ್ಧ ಆರ್ಟಿಒ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.
ಸೆಪ್ಟೆಂಬರ್ 11ರಿಂದ 15ರವರೆಗೆ ನಡೆದ ತಪಾಸಣೆಯಲ್ಲಿ 3,756 ಪ್ರಕರಣಗಳನ್ನು ದಾಖಲಿಸಲಾಗಿದೆ.
ಅಂತರರಾಜ್ಯ ಸೇವೆ ಸೇರಿದಂತೆ ಒಟ್ಟು 14,987 ಖಾಸಗಿ ಬಸ್ಗಳನ್ನು ಅಧಿಕಾರಿಗಳು ಪರಿಶೀಲಿಸಿದ್ದಾರೆ. ಈ ವೇಳೆ ಪರವಾನಗಿ ನಿಯಮ ಉಲ್ಲಂಘನೆ, ಪ್ರಯಾಣಿಕರಿಂದ ಹೆಚ್ಚುವರಿ ಶುಲ್ಕ ವಸೂಲಿ, ತೆರಿಗೆ ವಂಚನೆ ಸೇರಿದಂತೆ ಹಲವು ಅಕ್ರಮಗಳು ಪತ್ತೆಯಾಗಿವೆ.
ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ 33 ವಾಹನಗಳನ್ನು ಜಪ್ತಿ ಮಾಡಲಾಗಿದ್ದು, ಕಾರ್ಯಾಚರಣೆಯಲ್ಲಿ ಒಟ್ಟು ₹73.6 ಲಕ್ಷ ಸಂಗ್ರಹಿಸಲಾಗಿದೆ. ಇದರಲ್ಲಿ ₹40.3 ಲಕ್ಷ ದಂಡದ ಮೊತ್ತವಾಗಿದೆ.
ಇನ್ನು ಸಾರ್ವಜನಿಕರಿಂದ ಬಂದ ದೂರುಗಳನ್ನು ಹೆಚ್ಚಿನ ಕ್ರಮಕ್ಕಾಗಿ ಸಂಬಂಧಪಟ್ಟ ನೋಂದಣಿ ಪ್ರಾಧಿಕಾರಗಳಿಗೆ ಕಳುಹಿಸಲಾಗಿದೆ ಎಂದು ತಿಳಿಸಲಾಗಿದೆ.



