ಹುಬ್ಬಳ್ಳಿ: ನಗರದ ಗಬ್ಬೂರಿನಲ್ಲಿ ನಿರ್ಮಾಣಗೊಂಡಿರುವ ಕೆಎಲ್‌ಇ ಆಸ್ಪತ್ರೆ ನಾಳೆ ಲೋಕಾರ್ಪಣೆಗೊಳ್ಳಲಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬೆಳಗ್ಗೆ 11.30ಕ್ಕೆ ಆಸ್ಪತ್ರೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಸುಮಾರು ₹700 ಕೋಟಿ ವೆಚ್ಚದಲ್ಲಿ 50 ಎಕರೆ ಪ್ರದೇಶದಲ್ಲಿ ಈ ವೈದ್ಯಕೀಯ ಕ್ಯಾಂಪಸ್ ನಿರ್ಮಿಸಲಾಗಿದೆ. ಆಸ್ಪತ್ರೆಯು ಸುಮಾರು 1,200 ಹಾಸಿಗೆಗಳ ಸಾಮರ್ಥ್ಯ ಹೊಂದಿದ್ದು, ಮಲ್ಟಿ ಸ್ಪೆಷಾಲಿಟಿ ಮತ್ತು ಸೂಪರ್ ಸ್ಪೆಷಾಲಿಟಿ ಚಿಕಿತ್ಸಾ ಸೌಲಭ್ಯಗಳನ್ನು ಹೊಂದಿದೆ.
ಆಸ್ಪತ್ರೆಯಲ್ಲಿ ಅತ್ಯಾಧುನಿಕ ಕ್ಯಾಥ್‌ಲ್ಯಾಬ್, ಮಾಡ್ಯುಲರ್ ಆಪರೇಷನ್ ಥಿಯೇಟರ್ ಸೇರಿದಂತೆ ವಿವಿಧ ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
ಲೋಕಾರ್ಪಣೆ ಕಾರ್ಯಕ್ರಮದ ವೇಳೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರಕ್ಕೂ ಚಾಲನೆ ನೀಡಲಾಗುತ್ತದೆ. ಇಲ್ಲಿ ಸುಮಾರು 800 ವಿದ್ಯಾರ್ಥಿಗಳಿಗೆ ಪದವಿ ಮತ್ತು ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಪಡೆಯಲು ಅವಕಾಶವಿದೆ.
₹35 ಕೋಟಿ ವೆಚ್ಚದಲ್ಲಿ AI ಆಧಾರಿತ ಸ್ಕಿಲ್ ಲ್ಯಾಬ್ ಕೂಡ ಸ್ಥಾಪಿಸಲಾಗಿದೆ. ಅಮಿತ್ ಶಾ ಅವರು ಇಂದು ರಾತ್ರಿ 11 ಗಂಟೆಗೆ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ



