ಬೆಂಗಳೂರು: KPSC ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಗ್ಯಾನೇಂದ್ರ ಕುಮಾರ್ ಹಾಗೂ ಬಸವರಾಜ್ ಕನ್ನಾಳೆ ಅವರನ್ನು ಜೈಲಿನಲ್ಲೇ ಬಂಧಿಸಿ, ಹೆಚ್ಚಿನ ವಿಚಾರಣೆಗಾಗಿ ತನ್ನ ಕಸ್ಟಡಿಗೆ ಪಡೆದಿದೆ.
ಬಂಧನದಲ್ಲಿದ್ದ ಇಬ್ಬರನ್ನು ED ಅಧಿಕಾರಿಗಳು ಮೂರು ದಿನಗಳ ಕಾಲ ಜೈಲಿನಲ್ಲೇ ವಿಚಾರಣೆ ನಡೆಸಿದ್ದರು. ಆದರೆ ವಿಚಾರಣೆಗೆ ಅಸಹಕಾರ ನೀಡಿದ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಜೈಲಿನಲ್ಲೇ ಗ್ಯಾನೇಂದ್ರ ಕುಮಾರ್ ಹಾಗೂ ಬಸವರಾಜ್ ಕನ್ನಾಳೆ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಬಂಧನದ ಬಳಿಕ ಇಬ್ಬರನ್ನೂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ ED ಅಧಿಕಾರಿಗಳು, ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆದಿದ್ದಾರೆ. KPSC ನೇಮಕಾತಿಗೆ ಸಂಬಂಧಿಸಿದ ಅಕ್ರಮ ಹಾಗೂ ಹಗರಣದ ತನಿಖೆಯ ಭಾಗವಾಗಿ ಈ ಬಂಧನ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರಿಂದಲೂ ಮತ್ತಷ್ಟು ಮಾಹಿತಿ ಸಂಗ್ರಹಿಸಲು ED ಅಧಿಕಾರಿಗಳು ವಿಚಾರಣೆ ಮುಂದುವರಿಸಲಿದ್ದಾರೆ. ನೇಮಕಾತಿ ಅಕ್ರಮದ ಹಿನ್ನೆಲೆ, ಹಣಕಾಸಿನ ವ್ಯವಹಾರಗಳು ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಇತರ ಅಂಶಗಳ ಕುರಿತು ತನಿಖೆ ನಡೆಯುತ್ತಿದೆ.



