ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಸೆಪ್ಟೆಂಬರ್ 19ರಂದು ಭಾರೀ ಮಳೆಯೊಂದಿಗೆ ಗುಡುಗು-ಮಿಂಚಿನ ಸಾಧ್ಯತೆಯಿದ್ದು, ಸೆಪ್ಟೆಂಬರ್ 20 ಮತ್ತು 21ರಂದು ಕೂಡ ಮಳೆ ಅಥವಾ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮುಂದಿನ ದಿನಗಳಲ್ಲಿ ಬಂಗಾಳಕೊಲ್ಲಿಯಲ್ಲಿ ಉಂಟಾಗುವ ಹವಾಮಾನ ಬದಲಾವಣೆ ರಾಜ್ಯದ ಮಳೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದೆ. ಹೀಗಾಗಿ ಹಲವು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕರಾವಳಿ ಜಿಲ್ಲೆಗಳ ಜೊತೆಗೆ ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಬೀದರ್, ಕಲಬುರಗಿ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ಒಳನಾಡಿನ ಕೆಲವು ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯ ಸಾಧ್ಯತೆಯಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಬೆಂಗಳೂರಿನಲ್ಲೂ ಸೆಪ್ಟೆಂಬರ್ 22ರಂದು ಮಳೆ ಅಥವಾ ಗುಡುಗು ಸಹಿತ ಮಳೆಯೊಂದಿಗೆ ಬಿರುಗಾಳಿ ಬೀಸುವ ಸಾಧ್ಯತೆಯಿದ್ದು, ಸೆಪ್ಟೆಂಬರ್ 23 ಮತ್ತು 24ರಂದು ಹಗುರ ಮಳೆಯ ಮುನ್ಸೂಚನೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.



