ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದಲ್ಲಿ ಮುನೇಶ್ವರ ಸ್ವಾಮಿ ದೇವಾಲಯದ ಮೂರ್ತಿಯನ್ನು ದುಷ್ಕರ್ಮಿಗಳು ವಿರೂಪಗೊಳಿಸಿರುವ ಘಟನೆ ನಡೆದಿದೆ.
ಗ್ರಾಮದ ಮಜ್ಜಿಗೆಪುರ ರಸ್ತೆಯಲ್ಲಿರುವ ಮುನೇಶ್ವರ ಸ್ವಾಮಿ ದೇಗುಲದಲ್ಲಿ ತಡರಾತ್ರಿ ಈ ಕೃತ್ಯ ನಡೆದಿದೆ ಎನ್ನಲಾಗಿದೆ.
ದುಷ್ಕರ್ಮಿಗಳು ದೇವಾಲಯದ ಮೂರ್ತಿಯ ಮುಖದ ಭಾಗವನ್ನು ವಿರೂಪಗೊಳಿಸಿದ್ದಾರೆ. ಬೆಳಗ್ಗೆ ಈ ವಿಚಾರ ಗ್ರಾಮಸ್ಥರ ಗಮನಕ್ಕೆ ಬರುತ್ತಿದ್ದಂತೆ ಸ್ಥಳದಲ್ಲಿ ಆತಂಕ ಹಾಗೂ ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ.
ಪವಿತ್ರ ಸ್ಥಳದಲ್ಲಿ ಇಂತಹ ಕೃತ್ಯ ಎಸಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಪ್ರಕರಣದ ಆರೋಪಿಗಳನ್ನು ಕೂಡಲೇ ಪತ್ತೆಹಚ್ಚಿ ಬಂಧಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಕೆಆರ್ಎಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೇವಾಲಯದ ಸುತ್ತಮುತ್ತಲಿನ ಮಾಹಿತಿ ಹಾಗೂ ಲಭ್ಯವಿರುವ ಸುಳಿವುಗಳ ಆಧಾರದ ಮೇಲೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



