ಶಿವಮೊಗ್ಗ: ಜಿಲ್ಲಾಡಳಿತದ ಎಚ್ಚರಿಕೆ ಮತ್ತು ಮಾರ್ಗಸೂಚಿಗಳ ನಡುವೆಯೂ ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ 20 ವರ್ಷದ ಯುವಕ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ನಡೆದಿದೆ. ದೇವರಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದ್ದು, ಮೃತ ಯುವಕನನ್ನು ರಾಕೇಶ್ ಎಂದು ಗುರುತಿಸಲಾಗಿದೆ.
ಭದ್ರಾವತಿಯಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ರಾಕೇಶ್, ಭದ್ರಾವತಿ ತಾಲೂಕಿನ ರಂಗನಾಥಪುರದಲ್ಲಿ ಪ್ರತಿಷ್ಠಾಪಿಸಿದ್ದ ಗಣಪತಿಯ ವಿಸರ್ಜನಾ ಮೆರವಣಿಗೆಯಲ್ಲಿ ಭಾಗವಹಿಸಿದ್ದ. ಭಾನುವಾರ ಸಂಜೆ ಆರಂಭಗೊಂಡಿದ್ದ ಗಣೇಶ ವಿಸರ್ಜನಾ ಮೆರವಣಿಗೆ ತಡರಾತ್ರಿ ಸುಮಾರು 1 ಗಂಟೆ ವೇಳೆಗೆ ದೇವರಹಳ್ಳಿ ಕೆರೆ ಬಳಿ ತಲುಪಿತ್ತು.
ಈ ವೇಳೆ ಗಣೇಶ ವಿಸರ್ಜನೆ ಮಾಡುವ ಸಂದರ್ಭದಲ್ಲಿ ರಾಕೇಶ್ ಆಯತಪ್ಪಿ ಕೆರೆಗೆ ಬಿದ್ದು ನೀರಿನಲ್ಲಿ ಮುಳುಗಿ ಕಣ್ಮರೆಯಾಗಿದ್ದಾನೆ. ಘಟನೆ ತಿಳಿಯುತ್ತಿದ್ದಂತೆ ಸ್ಥಳೀಯರು ತಕ್ಷಣ ಶೋಧ ಕಾರ್ಯ ಆರಂಭಿಸಿದ್ದು, ಅಗ್ನಿಶಾಮಕ ದಳ ಹಾಗೂ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ.
ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ರಾತ್ರಿಯಿಡೀ ಕೆರೆಯಲ್ಲಿ ಶೋಧ ಕಾರ್ಯ ನಡೆಸಿದರು. ಆದರೆ ಕೆರೆಯಲ್ಲಿ ಗಿಡ-ಗಂಟಿಗಳು ಹಾಗೂ ಹುಲ್ಲು ಹೆಚ್ಚಾಗಿದ್ದರಿಂದ ಶೋಧ ಕಾರ್ಯಕ್ಕೆ ತೀವ್ರ ಅಡ್ಡಿಯಾಗಿತ್ತು. ನಿರಂತರ ಶೋಧ ಕಾರ್ಯದ ಬಳಿಕ ಇಂದು ಬೆಳಗ್ಗೆ ರಾಕೇಶ್ ಅವರ ಮೃತದೇಹ ಪತ್ತೆಯಾಗಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ತಾಲೂಕು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.



