ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದ್ದು, ಪ್ರಕರಣದ ಮರು ತನಿಖೆಗೆ ನಿರ್ದೇಶನ ನೀಡಿದೆ. ಹೊಸ ವಿಶೇಷ ತನಿಖಾ ತಂಡ (SIT) ರಚಿಸಿ ತನಿಖೆ ನಡೆಸುವಂತೆ ಸೂಚಿಸಿರುವ ಸುಪ್ರೀಂ ಕೋರ್ಟ್, ಮೂರು ತಿಂಗಳೊಳಗೆ ತನಿಖೆ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದೆ.
ಸೌಜನ್ಯ ಪ್ರಕರಣದ ತನಿಖೆಯನ್ನು ಈ ಹಿಂದೆ ಕೇಂದ್ರ ತನಿಖಾ ಸಂಸ್ಥೆ (CBI) ನಡೆಸಿತ್ತು. ತನಿಖೆಯ ಬಳಿಕ ಆರೋಪಿಗಳನ್ನು ಖುಲಾಸೆಗೊಳಿಸಲಾಗಿತ್ತು. ಇದಾದ ಬಳಿಕ ಸೌಜನ್ಯ ಅವರ ತಾಯಿ ಕುಸುಮಾವತಿ ಅವರು ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದರು.
ಆದರೆ, ಮರು ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಹೈಕೋರ್ಟ್ ಆದೇಶದ ಬಳಿಕ ಕುಸುಮಾವತಿ ಅವರು ಸುಪ್ರೀಂ ಕೋರ್ಟ್ಗೆ ವಿಶೇಷ ಮನವಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ನಡೆಸಿದ್ದ ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿ ಸಂಜಯ್ ಕುಮಾರ್ ನೇತೃತ್ವದ ಪೀಠ ತೀರ್ಪನ್ನು ಕಾಯ್ದಿರಿಸಿತ್ತು.
ಇದೀಗ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಹೊಸ ಎಸ್ಐಟಿ ರಚಿಸಿ ಪ್ರಕರಣದ ತನಿಖೆ ನಡೆಸುವಂತೆ ಸೂಚಿಸಿರುವ ನ್ಯಾಯಾಲಯ, ಮೂರು ತಿಂಗಳ ಅವಧಿಯಲ್ಲಿ ತನಿಖೆಯನ್ನು ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದೆ.
ಅಲ್ಲದೆ, ಈ ಹಿಂದೆ ಪ್ರಕರಣದ ತನಿಖೆ ನಡೆಸಿದ್ದ ಅಧಿಕಾರಿಗಳನ್ನು ಹೊಸದಾಗಿ ರಚಿಸಲಾಗುವ ಎಸ್ಐಟಿಯಲ್ಲಿ ಸೇರ್ಪಡೆಗೊಳಿಸಬಾರದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಸೂಚಿಸಿದೆ.
ಹೀಗಾಗಿ ಹಲವು ವರ್ಷಗಳಿಂದ ಚರ್ಚೆಯಲ್ಲಿರುವ ಧರ್ಮಸ್ಥಳ ಸೌಜನ್ಯ ಪ್ರಕರಣ ಇದೀಗ ಮತ್ತೊಮ್ಮೆ ಮರು ತನಿಖೆಯ ಹಂತಕ್ಕೆ ಬಂದಿದೆ. ಹೊಸ ಎಸ್ಐಟಿ ತನಿಖೆ ಆರಂಭಿಸಿದ ಬಳಿಕ ಪ್ರಕರಣದಲ್ಲಿ ಯಾವ ರೀತಿಯ ಬೆಳವಣಿಗೆಗಳು ನಡೆಯಲಿವೆ ಎಂಬುದು ಕುತೂಹಲ ಮೂಡಿಸಿದೆ.



