ಬೆಂಗಳೂರು: ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಕರ್ತವ್ಯನಿರತ ಪೊಲೀಸ್ ಅಧಿಕಾರಿಯ ಕುರಿತು ಏಕವಚನದಲ್ಲಿ ಮಾತನಾಡಿರುವುದನ್ನು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ತೀವ್ರವಾಗಿ ಖಂಡಿಸಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರದೀಪ್ ಈಶ್ವರ್, ಮೈಸೂರಿನ ಮಾಜಿ ಸಂಸದ ನಾಲಾಯಕ್, ಅಯೋಗ್ಯ, ಮುಠ್ಠಾಳ ಒಬ್ಬ ಇದ್ದಾನೆ. ಅವನು ಒಬ್ಬ ಸರ್ಕಲ್ ಇನ್ಸ್‌ಪೆಕ್ಟರ್ ಬಗ್ಗೆ ಏಕವಚನದಲ್ಲಿ ಮಾತನಾಡುತ್ತಾನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಧಾರ್ಮಿಕ ಸ್ಥಳಗಳು ಹಾಗೂ ಮೆರವಣಿಗೆಗಳ ವಿಚಾರದಲ್ಲಿ ಪ್ರಚೋದನಕಾರಿ ಅಥವಾ ಜವಾಬ್ದಾರಿರಹಿತ ಹೇಳಿಕೆಗಳನ್ನು ನೀಡುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಕರ್ತವ್ಯನಿರತ ಪೊಲೀಸ್ ಅಧಿಕಾರಿಯ ಬಗ್ಗೆ ಸಾರ್ವಜನಿಕವಾಗಿ ಅವಹೇಳನಕಾರಿ ರೀತಿಯಲ್ಲಿ ಮಾತನಾಡುವುದು ಸರಿಯಲ್ಲ. ಜನಪ್ರತಿನಿಧಿಗಳು ಹಾಗೂ ಮಾಜಿ ಜನಪ್ರತಿನಿಧಿಗಳು ಇಂತಹ ವಿಚಾರಗಳಲ್ಲಿ ಹೆಚ್ಚು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದು ಪ್ರದೀಪ್ ಈಶ್ವರ್ ತಿಳಿಸಿದರು.
ಇದೇ ವೇಳೆ ದಲಿತ ಸಮುದಾಯ ಹಾಗೂ ನೀಲಿ ಶಾಲಿನ ಕುರಿತು ಪ್ರತಾಪ್ ಸಿಂಹ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ದೇಶದ ನಿರ್ಮಾಣದಲ್ಲಿ ದಲಿತ ಸಮುದಾಯದ ಕೊಡುಗೆ ಮಹತ್ವದ್ದಾಗಿದೆ. ದಲಿತ ಸಂಘರ್ಷ ಸಮಿತಿ ಸೇರಿದಂತೆ ಸಮುದಾಯದ ಸಂಕೇತಗಳ ಬಗ್ಗೆ ಮಾತನಾಡುವಾಗ ಸಂಯಮ ಹಾಗೂ ಗೌರವ ಕಾಪಾಡಿಕೊಳ್ಳಬೇಕು ಎಂದು ಹೇಳಿದರು.
ಧಾರ್ಮಿಕ ಹಾಗೂ ಸಮುದಾಯದ ಸಂಕೇತಗಳನ್ನು ಮುಂದಿಟ್ಟುಕೊಂಡು ವಿವಾದ ಸೃಷ್ಟಿಸುವ ಪ್ರಯತ್ನಗಳನ್ನು ನಿಲ್ಲಿಸಬೇಕು. ದಲಿತ ಸಮುದಾಯದ ಭಾವನೆಗಳಿಗೆ ಧಕ್ಕೆ ಉಂಟುಮಾಡುವಂತಹ ಹೇಳಿಕೆ ನೀಡಿದ್ದರೆ, ಮಾಜಿ ಸಂಸದರು ಸಮುದಾಯದ ಕ್ಷಮೆಯಾಚಿಸಬೇಕು ಎಂದು ಪ್ರದೀಪ್ ಈಶ್ವರ್ ಒತ್ತಾಯಿಸಿದರು.



