ವಿಜಯಪುರ: ಬರಪೀಡಿತ ತಾಲೂಕುಗಳ ಪಟ್ಟಿಯಿಂದ ವಿಜಯಪುರ ಜಿಲ್ಲೆಯ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ ಅಸಮಾಧಾನಗೊಂಡ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸುವಂತೆ ಹಲವು ಬಾರಿ ಸರ್ಕಾರಕ್ಕೆ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿರುವ ಯಶವಂತರಾಯಗೌಡ ಪಾಟೀಲ್, ವಿಧಾನಸಭೆ ಸ್ಪೀಕರ್ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ.
‘ಹಲವು ಬಾರಿ ಮನವಿ ಮಾಡಿದರೂ ಇಂಡಿ ಮತ್ತು ಚಡಚಣ ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಿಲ್ಲ. ನಮ್ಮ ಮಾತಿಗೆ, ನಮ್ಮ ಭಾವನೆಗಳಿಗೆ ಬೆಲೆ ಇಲ್ಲದಂತಾಗಿದೆ’ ಎಂದು ಯಶವಂತರಾಯಗೌಡ ಪಾಟೀಲ್ ಅಸಮಾಧಾನ ಹೊರಹಾಕಿದ್ದಾರೆ.
ಅಷ್ಟೇ ಅಲ್ಲ, ಸದ್ಯದ ರಾಜಕೀಯ ವಾತಾವರಣದ ಬಗ್ಗೆಯೂ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ‘ಈಗಿನ ರಾಜಕೀಯ ವಾತಾವರಣದಲ್ಲಿ ಬಲಾಢ್ಯರಿಗೆ ಹಾಗೂ ಒತ್ತಡ ತಂತ್ರಗಳನ್ನು ಅನುಸರಿಸುವವರಿಗೆ ಮನ್ನಣೆ ಸಿಗುತ್ತಿದೆ. ನಮ್ಮಂತಹ ಸೌಮ್ಯ ಸ್ವಭಾವದವರಿಗೆ ಯಾವುದೇ ಕೆಲಸಗಳಲ್ಲೂ ಮನ್ನಣೆ ದೊರೆಯುತ್ತಿಲ್ಲ’ ಎಂದು ಹೇಳಿದ್ದಾರೆ.
‘ನನ್ನ ಕ್ಷೇತ್ರದ ಜನರ ಆಸೆ-ಆಶೋತ್ತರಗಳಿಗೆ ಸ್ಪಂದಿಸಲು ಸಾಧ್ಯವಾಗುತ್ತಿಲ್ಲ. ಕ್ಷೇತ್ರದ ಜನರಿಗೆ ನ್ಯಾಯ ಒದಗಿಸಲು ಸಾಧ್ಯವಾಗದಿರುವುದರಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ’ ಎಂದು ಯಶವಂತರಾಯಗೌಡ ಪಾಟೀಲ್ ತಮ್ಮ ನಿರ್ಧಾರಕ್ಕೆ ಕಾರಣ ತಿಳಿಸಿದ್ದಾರೆ.



