HomeGadag Newsನೀರಿಗಾಗಿ ಬಿಜೆಪಿ ಕಾರ್ಯಕರ್ತರ ಆಕ್ರೋಶ: ಬ್ಯಾರಿಕೇಡ್ ಕಿತ್ತು ಹಾಕಿ ನಗರಸಭೆಗೆ ನುಗ್ಗಲು ಯತ್ನ! ಪೊಲೀಸರ ಹರಸಾಹಸ

ನೀರಿಗಾಗಿ ಬಿಜೆಪಿ ಕಾರ್ಯಕರ್ತರ ಆಕ್ರೋಶ: ಬ್ಯಾರಿಕೇಡ್ ಕಿತ್ತು ಹಾಕಿ ನಗರಸಭೆಗೆ ನುಗ್ಗಲು ಯತ್ನ! ಪೊಲೀಸರ ಹರಸಾಹಸ

ಗದಗ: ಗದಗ–ಬೆಟಗೇರಿ ಅವಳಿ ನಗರದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಜಿಲ್ಲಾ ಬಿಜೆಪಿ ವತಿಯಿಂದ ನಡೆದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿತು. ನಗರಸಭೆಗೆ ಮುತ್ತಿಗೆ ಹಾಕಲು ಮುಂದಾದ ಬಿಜೆಪಿ ಕಾರ್ಯಕರ್ತರು ಪೊಲೀಸರ ಬ್ಯಾರಿಕೇಡ್‌ಗಳನ್ನು ಕಿತ್ತು ಹಾಕಿ ಒಳನುಗ್ಗಲು ಯತ್ನಿಸಿದರು. ಈ ವೇಳೆ ಕಾರ್ಯಕರ್ತರನ್ನು ತಡೆಯಲು ಪೊಲೀಸರು ಹರಸಾಹಸಪಟ್ಟರು.

ನಗರದ ಟಾಂಗಾ ಕೂಟದಿಂದ ಗಾಂಧಿ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಬಳಿಕ ಗಾಂಧಿ ವೃತ್ತದಲ್ಲಿ ಎರಡು ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ ನಡೆಸಿದರು. ಇದೇ ವೇಳೆ ನಗರದಲ್ಲಿನ ದಶಕಗಳ ಕುಡಿಯುವ ನೀರಿನ ಸಮಸ್ಯೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಮುಖಂಡ ಅನಿಲ್ ಮೆಣಸಿನಕಾಯಿ ಮಾತನಾಡಿ, ಗದಗ–ಬೆಟಗೇರಿ ಜನರು ಹಲವು ವರ್ಷಗಳಿಂದ ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ. ಜನರ ದಾಹ ನೀಗಿಸುವ ನಿಟ್ಟಿನಲ್ಲಿ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿದರು. ನೀರಿನ ಸಮಸ್ಯೆ ಬಗೆಹರಿಸಲು ವಿಫಲವಾಗಿರುವ ಸರ್ಕಾರ ಹಾಗೂ ಸ್ಥಳೀಯ ಆಡಳಿತದ ವಿರುದ್ಧ ಅವರು ಅಸಮಾಧಾನ ವ್ಯಕ್ತಪಡಿಸಿದರು.

ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬಳಿಕ ಬಿಜೆಪಿ ಕಾರ್ಯಕರ್ತರು ನಗರಸಭೆ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದರು. ಕಾರ್ಯಕರ್ತರನ್ನು ತಡೆಯಲು ಪೊಲೀಸರು ಬ್ಯಾರಿಕೇಡ್‌ಗಳನ್ನು ಅಳವಡಿಸಿದ್ದರು. ಆದರೆ ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ಕಿತ್ತು ಹಾಕಿ ನಗರಸಭೆ ಒಳಗೆ ನುಗ್ಗಲು ಯತ್ನಿಸಿದರು.

ಈ ವೇಳೆ ಪೊಲೀಸರು ಕಾರ್ಯಕರ್ತರನ್ನು ತಡೆಯಲು ಮುಂದಾದಾಗ ಕೆಲಕಾಲ ನೂಕಾಟ, ತಳ್ಳಾಟದ ವಾತಾವರಣ ನಿರ್ಮಾಣವಾಯಿತು. ನಗರಸಭೆಯೊಳಗೆ ಪ್ರತಿಭಟನಾಕಾರರು ಪ್ರವೇಶಿಸದಂತೆ ಪೊಲೀಸರು ಹರಸಾಹಸಪಟ್ಟರು.

ಇದಕ್ಕೂ ಮುನ್ನ ಟಾಂಗಾ ಕೂಟದಲ್ಲಿ ಬಿಜೆಪಿ ಕಾರ್ಯಕರ್ತರು ಹೋಮ ನಡೆಸಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿದರು. ನೀರು ಪೂರೈಕೆ ಸಮರ್ಪಕವಾಗದಿರುವುದನ್ನು ಖಂಡಿಸಿ ಘೋಷಣೆಗಳನ್ನು ಕೂಗಿದರು.

ಮಾಜಿ ಸಚಿವ ಹಾಗೂ ನರಗುಂದ ಶಾಸಕ ಸಿ.ಸಿ. ಪಾಟೀಲ ಪ್ರತಿಭಟನೆಯಲ್ಲಿ ಭಾಗವಹಿಸಿ ಪ್ರತಿಭಟನಾಕಾರರೊಂದಿಗೆ ಕೈಜೋಡಿಸಿದರು. ಸರ್ಕಾರ ಹಾಗೂ ಸ್ಥಳೀಯ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯ ತೀವ್ರತೆ ಹೆಚ್ಚಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದರು. ಕುಡಿಯುವ ನೀರಿನ ಸಮಸ್ಯೆ ಕುರಿತು ಪ್ರತಿಭಟನಾಕಾರರು ತಮ್ಮ ಬೇಡಿಕೆಗಳನ್ನು ಜಿಲ್ಲಾಧಿಕಾರಿಗಳ ಮುಂದಿಟ್ಟರು.

ನಗರದ ಹಲವು ವಾರ್ಡ್‌ಗಳಲ್ಲಿ ನಲ್ಲಿಗಳಿಗೆ ನಿಯಮಿತವಾಗಿ ನೀರು ಬಾರದ ಹಿನ್ನೆಲೆಯಲ್ಲಿ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಲಾಗುತ್ತಿದೆ. ಕುಡಿಯುವ ನೀರಿಗಾಗಿ ಜನರು ದೂರದ ಪ್ರದೇಶಗಳಿಗೆ ತೆರಳುವ ಪರಿಸ್ಥಿತಿ ಇದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಗದಗ–ಬೆಟಗೇರಿ ನಗರದ ಎಲ್ಲ ವಾರ್ಡ್‌ಗಳಿಗೆ ಸಮರ್ಪಕ ಹಾಗೂ ನಿಯಮಿತ ಕುಡಿಯುವ ನೀರು ಪೂರೈಸಬೇಕು. ಹಲವು ವರ್ಷಗಳಿಂದ ಮುಂದುವರಿದಿರುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು.- ಅನಿಲ ಮೆಣಸಿನಕಾಯಿ, ಬಿಜೆಪಿ ಮುಖಂಡ

 

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img