ಉಡುಪಿ: ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಇಬ್ಬರು ಯುವಕರು ಸುವರ್ಣ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಹೆರ್ಮುಂಡೆಯಲ್ಲಿ ನಡೆದಿದೆ.
ಮೃತರನ್ನು ಭರತ್ ಪೂಜಾರಿ (29) ಹಾಗೂ ಹರ್ಷನ್ ಆಚಾರ್ಯ (23) ಎಂದು ಗುರುತಿಸಲಾಗಿದೆ. ಕೆಲಸಕ್ಕೆ ರಜೆ ಇದ್ದ ಹಿನ್ನೆಲೆಯಲ್ಲಿ ಐವರು ಸ್ನೇಹಿತರು ಮಂಗಿಲಾರು ಮೂಲಕ ಸುಮಾರು ಎರಡು ಕಿಲೋಮೀಟರ್ ದುರ್ಗಮ ದಾರಿಯಲ್ಲಿ ನಡೆದು ಸುವರ್ಣ ನದಿಗೆ ತೆರಳಿದ್ದರು.
ನದಿಯಲ್ಲಿ ಈಜುತ್ತಿದ್ದ ವೇಳೆ ಭರತ್ ಹಾಗೂ ಹರ್ಷನ್ ಆಳವಾದ ನೀರಿಗೆ ತೆರಳಿದ್ದು, ಈ ವೇಳೆ ಇಬ್ಬರೂ ನೀರಿನಲ್ಲಿ ಮುಳುಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದಾರೆ.
ವಾಹನ ಸಂಚಾರಕ್ಕೆ ಸೂಕ್ತ ದಾರಿ ಇಲ್ಲದ ಕಾರಣ ಅಗ್ನಿಶಾಮಕ ದಳದ ಸಿಬ್ಬಂದಿ ಸುಮಾರು ಮೂರು ಕಿಲೋಮೀಟರ್ ನಡೆದು ಘಟನಾ ಸ್ಥಳಕ್ಕೆ ತಲುಪಿದ್ದಾರೆ. ಬಳಿಕ ಸ್ಥಳೀಯರ ಸಹಕಾರದೊಂದಿಗೆ ಮೂರು ಗಂಟೆಗೂ ಅಧಿಕ ಕಾಲ ಕಾರ್ಯಾಚರಣೆ ನಡೆಸಿ ಇಬ್ಬರ ಮೃತದೇಹಗಳನ್ನು ಮೇಲಕ್ಕೆತ್ತಲಾಗಿದೆ.
ಠಾಣಾಧಿಕಾರಿ ಸಂಜೀವ ದೇವಾಡಿಗ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಘಟನೆ ಸಂಬಂಧ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.



