ಚಿತ್ರದುರ್ಗ: ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48ರ ಉಪಾಧ್ಯ ಹೋಟೆಲ್ ಬಳಿ ಗುರುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸರ್ಕಾರಿ ಸಾರಿಗೆ ಸಂಸ್ಥೆಯ ಬಸ್ ಚಾಲಕ ಸೇರಿದಂತೆ ಇಬ್ಬರು ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ದಾವಣಗೆರೆಯಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಯೂರಿಯಾ ಗೊಬ್ಬರ ತುಂಬಿದ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಸಾರಿಗೆ ಸಂಸ್ಥೆಯ ರಾಜಹಂಸ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕ ನಾಗರಾಜ್ ನಾಯ್ಕ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಗಾಯಗೊಂಡವರನ್ನು ಶೋಭಾ, ವಿಜಯಕುಮಾರ್, ಮಹಾಲಿಂಗಪ್ಪ, ಜಗದೀಶ್, ಸಣ್ಣತಿಮ್ಮಪ್ಪ ಅಟ್ಟಪ್ಪ ಹಾಗೂ ಪ್ರಸನ್ನ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ತಕ್ಷಣ ಚಿತ್ರದುರ್ಗ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ನಡುವೆ ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬ ಪ್ರಯಾಣಿಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಬೇಕಿದೆ.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಸಂಚಾರಿ ಪೊಲೀಸರು ಹಾಗೂ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.



