ಬೆಂಗಳೂರು: ನಗರದ ಹೆಬ್ಬಾಳದ ಕೆಂಪಾಪುರದಲ್ಲಿ 25 ವರ್ಷದ ಜಿಮ್ ಟ್ರೈನರ್ವೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.
ಸ್ನೇಹಿತರೇ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಮೃತರನ್ನು ನಂದನ್ ಎಂದು ಗುರುತಿಸಲಾಗಿದೆ. ಶನಿವಾರ ಜಿಮ್ನ ಮೊದಲ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮವಿತ್ತು. ಕಾರ್ಯಕ್ರಮ ಮುಗಿದ ಬಳಿಕ ತಡವಾದರೆ ಬೆಳಗ್ಗೆ ಮನೆಗೆ ಬರುತ್ತೇನೆ ಎಂದು ಮನೆಯವರಿಗೆ ತಿಳಿಸಿ ನಂದನ್ ತೆರಳಿದ್ದರು.
ಆ್ಯನಿವರ್ಸರಿ ಕಾರ್ಯಕ್ರಮದ ಬಳಿಕ ನಂದನ್ ಇತರೆ ಸಿಬ್ಬಂದಿಯೊಂದಿಗೆ ಪರಿಚಿತರೊಬ್ಬರ ಅಪಾರ್ಟ್ಮೆಂಟ್ಗೆ ತೆರಳಿದ್ದರು. ಈ ವೇಳೆ ಅಪಾರ್ಟ್ಮೆಂಟ್ನಲ್ಲಿ ಗಲಾಟೆ ನಡೆದಿದ್ದು, ನಂದನ್ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಗಂಭೀರವಾಗಿ ಗಾಯಗೊಂಡಿದ್ದ ನಂದನ್ ಅವರನ್ನು ಹೆಬ್ಬಾಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ. ವಿಚಾರ ತಿಳಿದು ಆಸ್ಪತ್ರೆಗೆ ತೆರಳಿದ ನಂದನ್ ಅವರ ತಾಯಿ, ಮಗನ ದೇಹದ ಮೇಲೆ ಗಾಯದ ಗುರುತುಗಳಿರುವುದನ್ನು ಗಮನಿಸಿದ್ದಾರೆ.
ಅಪಾರ್ಟ್ಮೆಂಟ್ನಲ್ಲಿ ಗಲಾಟೆ ನಡೆದು ನಂದನ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ ಎಂದು ಅವರ ತಾಯಿ ಮಂಜುಳಾ ಅಮೃತಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ದೂರಿನ ಆಧಾರದ ಮೇಲೆ ಪೊಲೀಸರು ನಾಲ್ವರ ವಿರುದ್ಧ ಎಫ್ಐಆರ್ ದಾಖಲಿಸಿದ್ದು, ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ.



