ಬೆಂಗಳೂರು: ರಾಜ್ಯದಲ್ಲಿ ಮಳೆಯ ವಾತಾವರಣ ಇನ್ನೂ ಮುಂದುವರಿಯುವ ಸಾಧ್ಯತೆ ಇದೆ.
ಕರಾವಳಿ ಕರ್ನಾಟಕದ ಜಿಲ್ಲೆಗಳ ಜೊತೆಗೆ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲೂ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಇಂದು ಅಂದರೆ ಅಕ್ಟೋಬರ್ 7ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಬಹುದು. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲೂ ಮಳೆಯೊಂದಿಗೆ ಗುಡುಗು ಕಾಣಿಸಿಕೊಳ್ಳುವ ಸಾಧ್ಯತೆ ಇದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ ಹಾಗೂ ರಾಮನಗರ ಜಿಲ್ಲೆಗಳ ಕೆಲವು ಕಡೆ ಹಗುರ ಮಳೆಯಾಗುವ ಸಾಧ್ಯತೆ ಇದ್ದು, ಗುಡುಗು ಸಹಿತ ಮಳೆಯ ಮುನ್ಸೂಚನೆಯೂ ಇದೆ.
ಇನ್ನು ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ.
ನಾಳೆಯೂ ಮಳೆ ಮುಂದುವರಿಯುತ್ತಾ?
ಅಕ್ಟೋಬರ್ 8ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆ ಮಳೆಯಾಗಬಹುದು.
ಆದರೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ.
7 ಸೆಂ.ಮೀ ಮಳೆ ದಾಖಲು:
ಮಂಗಳವಾರ ಸಂಜೆಯವರೆಗೆ ದಕ್ಷಿಣ ಒಳನಾಡು ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿತ್ತು. ಕರಾವಳಿ ಕರ್ನಾಟಕದಲ್ಲಿ ಸಾಮಾನ್ಯ ಹಾಗೂ ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು.
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆ ಮಳೆಯಾಗಿದ್ದು, ತುಮಕೂರು ಜಿಲ್ಲೆಯ ಬರ್ಗೂರು ಹಾಗೂ ಬೆಂಗಳೂರಿನ ಜಿಕೆವಿಕೆ ವ್ಯಾಪ್ತಿಯಲ್ಲಿ ತಲಾ 7 ಸೆಂ.ಮೀ ಮಳೆ ದಾಖಲಾಗಿದೆ.



