ಶಿವಮೊಗ್ಗ: ಬೆಂಗಳೂರಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡು ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಆನಂದಪುರ ಬಳಿಯ ಮುಂಬಾಳು ಗ್ರಾಮದಲ್ಲಿ ನಡೆದಿದೆ.
ಬೆಂಗಳೂರು-ಹೊನ್ನಾವರ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಬಸ್ ಸಂಚರಿಸುತ್ತಿದ್ದ ವೇಳೆ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಕ್ಷಣಾರ್ಧದಲ್ಲೇ ಬೆಂಕಿ ಬಸ್ನಾದ್ಯಂತ ವ್ಯಾಪಿಸಿದ್ದು, ಬಸ್ ಸಂಪೂರ್ಣವಾಗಿ ಸುಟ್ಟುಹೋಗಿದೆ.
ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ಮತ್ತು ಕ್ಲೀನರ್ ಕೂಡಲೇ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಹೀಗಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಬಹುತೇಕ ಪ್ರಯಾಣಿಕರು ಶಿವಮೊಗ್ಗದಲ್ಲೇ ಇಳಿದಿದ್ದರು. ಘಟನೆ ವೇಳೆ ಬಸ್ನಲ್ಲಿ ಇಬ್ಬರು ಪ್ರಯಾಣಿಕರು ಮಾತ್ರ ಸಾಗರಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.
ಹೆಚ್ಚಿನ ಪ್ರಯಾಣಿಕರು ಬಸ್ನಲ್ಲಿದ್ದಿದ್ದರೆ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು ಎನ್ನಲಾಗಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಿದ್ದಾರೆ. ಆನಂದಪುರ ಠಾಣೆಯ ಪಿಎಸ್ಐ ಪ್ರವೀಣ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



