ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2026ರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಚಾಮುಂಡಿ ಬೆಟ್ಟದಲ್ಲಿ ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪಿದ್ದು, ನಾಳೆ ಬೆಳಗ್ಗೆ ನಿಗದಿತ ಶುಭ ಲಗ್ನದಲ್ಲಿ ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ ದೊರೆಯಲಿದೆ. ಮತ್ತೊಂದೆಡೆ, ಮಹಿಷಾಸುರ ಪ್ರತಿಮೆಯ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಚಾಮುಂಡಿ ಬೆಟ್ಟದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಚಾಮುಂಡಿ ಬೆಟ್ಟದಲ್ಲಿರುವ ಮಹಿಷಾಸುರ ಪ್ರತಿಮೆಯ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಪ್ರತಿಮೆಯ ಸುತ್ತಲೂ ಪೊಲೀಸರು ಬ್ಯಾರಿಕೇಡ್ಗಳನ್ನು ಅಳವಡಿಸಿದ್ದು, ಬೆಟ್ಟದ ಮೇಲೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಆಚರಣೆಗೆ ಜಿಲ್ಲಾಡಳಿತ ಅವಕಾಶ ನೀಡದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಮಹಿಷ ದಸರಾ ಆಚರಣೆಗೆ ಮೈಸೂರಿನ ಟೌನ್ ಹಾಲ್ನಲ್ಲಿ ಅವಕಾಶ ಕಲ್ಪಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದಾರೆ.
ಇನ್ನೊಂದೆಡೆ, ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡೇಶ್ವರಿ ದೇವಾಲಯದಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ದೇವಾಲಯದ ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ಅವರ ನೇತೃತ್ವದಲ್ಲಿ ಚಾಮುಂಡೇಶ್ವರಿ ತಾಯಿಯ ಉತ್ಸವ ಮೂರ್ತಿಯ ಶುದ್ಧಿ ಕಾರ್ಯವನ್ನು ನೆರವೇರಿಸಲಾಗಿದೆ.
ಮೈಸೂರು ಅರಮನೆಯಿಂದ ಚಾಮುಂಡಿ ಬೆಟ್ಟಕ್ಕೆ ತರಲಾಗಿರುವ ಮಹಿಷಮರ್ದಿನಿ ಅವತಾರದ ಉತ್ಸವ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ನವರಾತ್ರಿಯ ಪ್ರತಿದಿನ ಚಾಮುಂಡೇಶ್ವರಿ ತಾಯಿಗೆ ಪ್ರಾಣಪ್ರತಿಷ್ಠಾಪನೆ ನೆರವೇರಿಸಿ, ಉತ್ಸವ ಮೂರ್ತಿಗೆ ವಿಶೇಷ ಪೂಜೆಗಳನ್ನು ಸಲ್ಲಿಸುವ ಧಾರ್ಮಿಕ ವಿಧಿವಿಧಾನಗಳು ನಡೆಯಲಿವೆ.
ನಾಳೆ ಬೆಳಗ್ಗೆ ನಿಗದಿತ ಶುಭ ಲಗ್ನದಲ್ಲಿ ಚಾಮುಂಡೇಶ್ವರಿ ದೇವಾಲಯದ ಆವರಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಲಾಗುತ್ತದೆ. ಕಾರ್ಯಕ್ರಮಕ್ಕಾಗಿ ದೇವಾಲಯದ ಆವರಣದಲ್ಲಿ ವಿಶೇಷ ವೇದಿಕೆ ನಿರ್ಮಿಸಲಾಗಿದೆ. ದಸರಾ ಉದ್ಘಾಟಕರು, ಮುಖ್ಯಮಂತ್ರಿ, ಸಚಿವರು ಹಾಗೂ ಶಾಸಕರು ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ.
ಈ ಬಾರಿಯ ಕಾರ್ಯಕ್ರಮದಲ್ಲಿ 100ಕ್ಕೂ ಹೆಚ್ಚು ವಿವಿಧ ಧರ್ಮಗುರುಗಳು ಭಾಗವಹಿಸುವ ನಿರೀಕ್ಷೆಯಿದೆ. ಧರ್ಮಗುರುಗಳಿಗಾಗಿ ಪ್ರತ್ಯೇಕ ಆಸನ ವ್ಯವಸ್ಥೆ ಕಲ್ಪಿಸಲಾಗಿದ್ದು, ವಿವಿಐಪಿ, ವಿಐಪಿ ಹಾಗೂ ಸಾರ್ವಜನಿಕರಿಗೂ ಪ್ರತ್ಯೇಕ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮ ಸುಗಮವಾಗಿ ನಡೆಯುವಂತೆ ದೇವಾಲಯದ ಆವರಣದಲ್ಲಿ ಬ್ಯಾರಿಕೇಡ್ಗಳನ್ನು ಅಳವಡಿಸಲಾಗಿದ್ದು, ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದೆ. ನಾಡಹಬ್ಬದ ಉದ್ಘಾಟನಾ ಸಮಾರಂಭವನ್ನು ಯಾವುದೇ ಅಡಚಣೆಯಿಲ್ಲದೆ ನಡೆಸಲು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿವೆ.



