ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸುವ ಪ್ರಕ್ರಿಯೆಯಲ್ಲಿ ದಿಢೀರ್ ಬದಲಾವಣೆಯಾಗಿದೆ.
ಬೆಳಗಾವಿಗೆ ಕರೆದೊಯ್ಯುತ್ತಿದ್ದ ಪೊಲೀಸರು, ಮಾರ್ಗಮಧ್ಯೆ ತುಮಕೂರಿನವರೆಗೆ ತಲುಪಿದ ಬಳಿಕ ಅವರನ್ನು ಮತ್ತೆ ಬೆಂಗಳೂರಿಗೆ ಕರೆತಂದಿದ್ದಾರೆ.
ಶನಿವಾರ ಸಂಜೆ ಸಿಎಆರ್ ಎಸ್ಕಾರ್ಟ್ ಪೊಲೀಸರ ಬಿಗಿ ಭದ್ರತೆಯಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಬೆಳಗಾವಿಗೆ ಕರೆದೊಯ್ಯಲಾಗುತ್ತಿತ್ತು. ಪೊಲೀಸ್ ವಾಹನ ತುಮಕೂರು ತಲುಪುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರಿಂದ ಬೆಂಗಾವಲು ಪಡೆಗೆ ತುರ್ತು ಕರೆ ಬಂದಿದೆ ಎನ್ನಲಾಗಿದೆ. ಮೇಲಧಿಕಾರಿಗಳ ಸೂಚನೆಯ ಮೇರೆಗೆ ಪೊಲೀಸರು ವಾಹನವನ್ನು ಹಿಂದಕ್ಕೆ ತಿರುಗಿಸಿ, ರಾತ್ರಿಯೇ ಪ್ರಜ್ವಲ್ ರೇವಣ್ಣ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆತಂದಿದ್ದಾರೆ.
ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಎರಡು ಪ್ರಮುಖ ಪ್ರಕರಣಗಳ ವಿಚಾರಣೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿದೆ. ವಿಚಾರಣೆಯ ಕೆಲವು ಪ್ರಮುಖ ಹಂತಗಳಲ್ಲಿ ಆರೋಪಿಯು ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗಬೇಕಾಗುವ ಸಾಧ್ಯತೆ ಇರುವುದರಿಂದ, ಜೈಲು ಸ್ಥಳಾಂತರದ ನಿರ್ಧಾರದಲ್ಲಿ ಬದಲಾವಣೆಯಾಗಿರುವ ಸಾಧ್ಯತೆ ಇದೆ.
ಆದರೆ, ಅವರನ್ನು ಬೆಳಗಾವಿಗೆ ಕರೆದೊಯ್ಯುವ ಪ್ರಕ್ರಿಯೆಯನ್ನು ಅರ್ಧದಲ್ಲೇ ನಿಲ್ಲಿಸಿ ವಾಪಸ್ ಕರೆತಂದಿದ್ದಕ್ಕೆ ನಿಖರ ಕಾರಣವೇನು ಎಂಬ ಬಗ್ಗೆ ಅಧಿಕೃತ ಸ್ಪಷ್ಟನೆ ಲಭ್ಯವಾಗಿಲ್ಲ. ಪೊಲೀಸ್ ಅಧಿಕಾರಿಗಳ ಸೂಚನೆಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.



