HomeIndia NewsJantar Mantarನಲ್ಲಿ ಇನ್ಮುಂದೆ ಪ್ರತಿಭಟನೆಗೆ ಬ್ರೇಕ್? ಕೇಂದ್ರ ಗೃಹ ಸಚಿವಾಲಯದಿಂದ ಮಹತ್ವದ ಆದೇಶ!

Jantar Mantarನಲ್ಲಿ ಇನ್ಮುಂದೆ ಪ್ರತಿಭಟನೆಗೆ ಬ್ರೇಕ್? ಕೇಂದ್ರ ಗೃಹ ಸಚಿವಾಲಯದಿಂದ ಮಹತ್ವದ ಆದೇಶ!

For Dai;y Updates Join Our whatsapp Group

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್‌ ಮಂತರ್‌ನಲ್ಲಿ ನಡೆಯುತ್ತಿರುವ ನಿರಂತರ ಪ್ರತಿಭಟನೆಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂಬ ಕಾರಣಕ್ಕೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ವರದಿಯಾಗಿದೆ. ಜಂತರ್‌ ಮಂತರ್‌ನಲ್ಲಿ ಇನ್ನು ಮುಂದೆ ಪ್ರತಿಭಟನೆ ಮತ್ತು ಧರಣಿಗಳಿಗೆ ಅವಕಾಶ ನೀಡದಿರಲು ನಿರ್ಧರಿಸಲಾಗಿದ್ದು, ಪ್ರತಿಭಟನೆಗಳಿಗಾಗಿ ಮೂರು ಪರ್ಯಾಯ ಸ್ಥಳಗಳನ್ನು ಗುರುತಿಸಲಾಗಿದೆ ಎಂದು ತಿಳಿದುಬಂದಿದೆ.

ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿನ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ. ದೆಹಲಿಯಲ್ಲಿ ಪ್ರತಿಭಟನೆಗಳನ್ನು ವ್ಯವಸ್ಥಿತವಾಗಿ ನಡೆಸಲು ರಾಮಲೀಲಾ ಮೈದಾನ, ಬುರಾರಿ ಮೈದಾನ ಹಾಗೂ ಪೂರ್ವ ದೆಹಲಿಯ ಸಿಬಿಡಿ ಮೈದಾನವನ್ನು ಗುರುತಿಸಲಾಗಿದೆ. ಮುಂದಿನ ದಿನಗಳಲ್ಲಿ ಪ್ರತಿಭಟನೆ ಮತ್ತು ಧರಣಿಗಳನ್ನು ಈ ಸ್ಥಳಗಳಲ್ಲೇ ನಡೆಸಲು ಅವಕಾಶ ನೀಡಲಾಗುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ದೆಹಲಿಯ ಮಧ್ಯಭಾಗದಲ್ಲಿರುವ ಜಂತರ್‌ ಮಂತರ್‌ ಹಲವು ವರ್ಷಗಳಿಂದ ರಾಜಕೀಯ ಪಕ್ಷಗಳು, ಸಂಘಟನೆಗಳು ಹಾಗೂ ಸಾರ್ವಜನಿಕ ಹೋರಾಟಗಳಿಗೆ ಪ್ರಮುಖ ಸ್ಥಳವಾಗಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೇಶದ ನಾನಾ ಭಾಗಗಳಿಂದ ಆಗಮಿಸುವ ಪ್ರತಿಭಟನಾಕಾರರು ಇಲ್ಲಿ ಧರಣಿ ನಡೆಸುತ್ತಿದ್ದರು. ಆದರೆ ನಿರಂತರ ಪ್ರತಿಭಟನೆಗಳಿಂದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರ ದಟ್ಟಣೆ, ಭದ್ರತಾ ಸಮಸ್ಯೆಗಳು ಹಾಗೂ ಸಾರ್ವಜನಿಕರಿಗೆ ಅನಾನುಕೂಲ ಉಂಟಾಗುತ್ತಿದೆ ಎಂಬ ಕಾರಣವನ್ನು ಮುಂದಿಟ್ಟು ಹೊಸ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

ಇತ್ತೀಚೆಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಇಂಡಿಯಾ ಒಕ್ಕೂಟದ ನಾಯಕರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೇ ಬೇಡಿಕೆ ಮುಂದಿಟ್ಟು ಕಾಕ್ರೋಚ್ ಜನತಾ ಪಾರ್ಟಿ (CJP) ಕೂಡ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ವರದಿಯಾಗಿದೆ.

ಈ ಬೆಳವಣಿಗೆಗಳ ನಡುವೆಯೇ ಜಂತರ್‌ ಮಂತರ್‌ನಲ್ಲಿ ಹೊಸ ಪ್ರತಿಭಟನೆಗಳಿಗೆ ಅನುಮತಿ ನೀಡುವುದಿಲ್ಲ ಎಂಬ ಸೂಚನೆ ಹೊರಬಿದ್ದಿದೆ. ಪ್ರತಿಭಟನೆಗಳನ್ನು ನಡೆಸಲು ಗುರುತಿಸಲಾಗಿರುವ ಪರ್ಯಾಯ ಸ್ಥಳಗಳನ್ನು ಬಳಸುವಂತೆ ದೆಹಲಿ ಪೊಲೀಸರು ಸೂಚಿಸಿದ್ದಾರೆ ಎನ್ನಲಾಗಿದೆ.

ಇನ್ನೊಂದೆಡೆ, ಪ್ರತಿಭಟನೆಗಳ ಮೇಲಿನ ನಿರ್ಬಂಧವು ಪ್ರಜಾಸತ್ತಾತ್ಮಕ ಹಕ್ಕುಗಳ ಕುರಿತು ಚರ್ಚೆಗೆ ಕಾರಣವಾಗುವ ಸಾಧ್ಯತೆಯಿದೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸುವ ಹಕ್ಕನ್ನು ರಕ್ಷಿಸಬೇಕು ಎಂಬುದು ಪ್ರತಿಪಕ್ಷಗಳ ನಿಲುವಾಗಿದ್ದು, ಜಂತರ್‌ ಮಂತರ್‌ನಲ್ಲಿ ಪ್ರತಿಭಟನಾಕಾರರ ವಿರುದ್ಧ ಪೊಲೀಸರು ಕೈಗೊಂಡ ಕ್ರಮಗಳನ್ನು ಈಗಾಗಲೇ ಟೀಕಿಸಿವೆ.

ದೆಹಲಿ ಪೊಲೀಸ್ ಇಲಾಖೆ ಕೇಂದ್ರ ಗೃಹ ಸಚಿವಾಲಯದ ವ್ಯಾಪ್ತಿಗೆ ಒಳಪಡುವುದರಿಂದ, ಈ ನಿರ್ಧಾರಕ್ಕೆ ರಾಜಕೀಯ ಮಹತ್ವವೂ ದೊರೆತಿದೆ. ಸಾರ್ವಜನಿಕ ಸುರಕ್ಷತೆ ಹಾಗೂ ಸಂಚಾರ ವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ನಿರ್ಬಂಧ ವಿಧಿಸಲಾಗಿದೆ ಎಂದು ಹೇಳಲಾಗುತ್ತಿದ್ದರೂ, ಪ್ರತಿಭಟನೆಯ ಹಕ್ಕಿನ ಮೇಲೆ ಇದು ಯಾವ ರೀತಿಯ ಪರಿಣಾಮ ಬೀರಲಿದೆ ಎಂಬ ಪ್ರಶ್ನೆಯೂ ಎದುರಾಗಿದೆ.

 

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img