ಬೆಂಗಳೂರು: ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡಗಳ (ST) ಮೀಸಲಾತಿ ಹಕ್ಕುಗಳನ್ನು ರಕ್ಷಿಸುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.
ಬಸವರಾಜ ಬೊಮ್ಮಾಯಿ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರ ಹೆಚ್ಚಿಸಿದ್ದ ಮೀಸಲಾತಿ ಪ್ರಮಾಣವನ್ನು ಹೈಕೋರ್ಟ್ ರದ್ದುಪಡಿಸಿರುವ ವಿಚಾರವಾಗಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಹಿಂದಿನ ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಿತ್ತು. ಈ ನಿರ್ಧಾರವನ್ನು ನ್ಯಾಯಾಲಯದಲ್ಲಿ ಸಮರ್ಥಿಸಿಕೊಳ್ಳುವಲ್ಲಿ ಮತ್ತು ಪರಿಶಿಷ್ಟ ಸಮುದಾಯಗಳ ಹಕ್ಕುಗಳನ್ನು ರಕ್ಷಿಸುವಲ್ಲಿ ಕಾಂಗ್ರೆಸ್ ಸರ್ಕಾರದ ನಡೆ ಪ್ರಶ್ನಾರ್ಹವಾಗಿದೆ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.
ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ಕಾಂಗ್ರೆಸ್ ಸರ್ಕಾರ, ಪರಿಶಿಷ್ಟ ಸಮುದಾಯಗಳಿಗೆ ಈಗಾಗಲೇ ದೊರೆತಿರುವ ಹಕ್ಕುಗಳನ್ನು ರಕ್ಷಿಸುವ ಜವಾಬ್ದಾರಿಯನ್ನು ನಿರ್ವಹಿಸುತ್ತಿಲ್ಲ ಎಂದು ಅವರು ಟೀಕಿಸಿದ್ದಾರೆ.
ಮೀಸಲಾತಿ ಹೆಚ್ಚಳದ ವಿಚಾರದಲ್ಲಿ ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು. ಹೈಕೋರ್ಟ್ ಆದೇಶವನ್ನು ಸಮಗ್ರವಾಗಿ ಪರಿಶೀಲಿಸಿ, ಮೇಲ್ಮನವಿ ಸೇರಿದಂತೆ ಸೂಕ್ತ ಕಾನೂನು ಮಾರ್ಗಗಳನ್ನು ಬಳಸಿಕೊಂಡು ಪರಿಶಿಷ್ಟರ ಹಕ್ಕುಗಳನ್ನು ರಕ್ಷಿಸಬೇಕು ಎಂದು ಆಗ್ರಹಿಸಿದ್ದಾರೆ.
ಸರ್ಕಾರ ಇದೇ ನಿರ್ಲಕ್ಷ್ಯವನ್ನು ಮುಂದುವರಿಸಿದರೆ ಪರಿಶಿಷ್ಟ ಸಮುದಾಯಗಳ ಹಕ್ಕುಗಳ ರಕ್ಷಣೆಗಾಗಿ ರಾಜ್ಯಾದ್ಯಂತ ಬೃಹತ್ ಹೋರಾಟ ರೂಪಿಸಲಾಗುವುದು. ಪರಿಶಿಷ್ಟರ ಹಕ್ಕುಗಳ ರಕ್ಷಣೆಯಲ್ಲಿ ಯಾವುದೇ ರಾಜಿ ಇಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.



