ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದೆ. ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ನೀಡಲಾಗಿದ್ದ ಕಾಲಾವಕಾಶ ಅಕ್ಟೋಬರ್ 22ರಂದು ಮುಕ್ತಾಯಗೊಂಡಿದ್ದು, ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಆಯೋಗ, ರಾಜ್ಯಾದ್ಯಂತ ಮತದಾರರ ಪಟ್ಟಿಯ ಪರಿಶೀಲನೆಗಾಗಿ 43 ಲಕ್ಷಕ್ಕೂ ಅಧಿಕ ನೋಟಿಸ್ಗಳನ್ನು ಜಾರಿಗೊಳಿಸಲಾಗಿದ್ದು, ಅವುಗಳ ವಿಚಾರಣೆ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದೆ.
ಜೂನ್ 16ರಿಂದ ಅಕ್ಟೋಬರ್ 22ರವರೆಗೆ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಒಟ್ಟು 25,87,461 ಅರ್ಜಿಗಳು ಸಲ್ಲಿಕೆಯಾಗಿವೆ. ಹೊಸದಾಗಿ ಹೆಸರು ಸೇರ್ಪಡೆಗಾಗಿ ಫಾರ್ಮ್ 6 ಮೂಲಕ 10,42,863 ಅರ್ಜಿಗಳು, ವಿದೇಶದಲ್ಲಿರುವ ಭಾರತೀಯ ಮತದಾರರ ನೋಂದಣಿಗಾಗಿ ಫಾರ್ಮ್ 6ಎ ಮೂಲಕ 4,840 ಅರ್ಜಿಗಳು ಸಲ್ಲಿಕೆಯಾಗಿವೆ.
ಇನ್ನು ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ಅಥವಾ ಹೆಸರು ಸೇರ್ಪಡೆಗೆ ಆಕ್ಷೇಪಣೆ ಸಲ್ಲಿಸಲು ಫಾರ್ಮ್ 7 ಮೂಲಕ 2,28,917 ಅರ್ಜಿಗಳು ಬಂದಿವೆ. ಹೆಸರು, ವಿಳಾಸ ಸೇರಿದಂತೆ ಮತದಾರರ ವಿವರಗಳ ತಿದ್ದುಪಡಿಗಾಗಿ ಫಾರ್ಮ್ 8 ಮೂಲಕ 13,10,841 ಅರ್ಜಿಗಳು ಸಲ್ಲಿಕೆಯಾಗಿವೆ.
ಸೆಪ್ಟೆಂಬರ್ 23ರವರೆಗೆ ಸ್ವೀಕರಿಸಲಾದ ಎಲ್ಲಾ ಫಾರ್ಮ್ 7 ಅರ್ಜಿಗಳನ್ನು ಆದ್ಯತೆಯ ಮೇರೆಗೆ ಪರಿಶೀಲಿಸಿ ವಿಲೇವಾರಿ ಮಾಡಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಬೆಂಗಳೂರು ನಗರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳು ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಎಲ್ಲ ವಲಯಗಳಲ್ಲಿ ನೋಟಿಸ್ಗಳ ವಿತರಣೆ ಮತ್ತು ವಿಚಾರಣೆ ಪೂರ್ಣಗೊಂಡಿದೆ. ಈ ಪ್ರಕ್ರಿಯೆಯಲ್ಲಿ ಯಾವುದೇ ವಿಚಾರಣೆ ಬಾಕಿ ಉಳಿದಿಲ್ಲ ಎಂದು ಆಯೋಗ ಸ್ಪಷ್ಟಪಡಿಸಿದೆ.
ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿ ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ಮತದಾರರು ತಮ್ಮ ಹೆಸರು, ವಿಳಾಸ ಹಾಗೂ ಇತರ ವಿವರಗಳನ್ನು ಪರಿಶೀಲಿಸಿಕೊಳ್ಳುವುದು ಮುಖ್ಯವಾಗಿದೆ. ಮತದಾರರ ಪಟ್ಟಿಯಲ್ಲಿ ಹೆಸರು ಇರುವುದನ್ನು ಭಾರತೀಯ ಚುನಾವಣಾ ಆಯೋಗದ ಅಧಿಕೃತ ಮತದಾರರ ಸೇವಾ ಪೋರ್ಟಲ್ ಮೂಲಕವೂ ಪರಿಶೀಲಿಸಬಹುದು.








