ಚೆನ್ನೈ: ತಮಿಳುನಾಡಿನಲ್ಲಿ ಈಶಾನ್ಯ ಮಾನ್ಸೂನ್ ಅಬ್ಬರ ಮುಂದುವರಿದಿದ್ದು, ಭಾರಿ ಮಳೆ ಮತ್ತು ಸಿಡಿಲಿನಿಂದ ಜನಜೀವನ ಅಸ್ತವ್ಯಸ್ತವಾಗಿದೆ.
ರಾಜ್ಯದ ವಿವಿಧ ಭಾಗಗಳಲ್ಲಿ ಸಿಡಿಲು ಬಡಿದು ಈವರೆಗೆ 14 ಮಂದಿ ಮೃತಪಟ್ಟಿದ್ದಾರೆ. ಮಳೆ ಮತ್ತು ಭೂಕುಸಿತದ ಅಪಾಯ ಹೆಚ್ಚಿರುವ ಹಿನ್ನೆಲೆಯಲ್ಲಿ ಪ್ರಮುಖ ಗಿರಿಧಾಮಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
ತಮಿಳುನಾಡಿನ ಕಂದಾಯ ಸಚಿವ ಕೆ.ಎ. ಸೆಂಗೋಟ್ಟೈಯನ್ ಅವರು ಸಿಡಿಲಿನಿಂದ 14 ಮಂದಿ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ ₹4 ಲಕ್ಷ ಪರಿಹಾರ ನೀಡಲಾಗಿದೆ. ಒಂದೇ ದಿನದಲ್ಲಿ ಮಳೆ ಸಂಬಂಧಿತ ಘಟನೆಗಳಿಂದ 35 ಮಂದಿ ಮೃತಪಟ್ಟಿದ್ದಾರೆ ಎಂಬ ವರದಿಗಳನ್ನು ಸಚಿವರು ತಳ್ಳಿಹಾಕಿದ್ದು, ಇತರ ಸಾವುಗಳ ಕುರಿತು ಜಿಲ್ಲಾಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ನೀಲಗಿರಿಯಲ್ಲಿ 62 ಕಡೆ ಭೂಕುಸಿತ:
ನೀಲಗಿರಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದಾಗಿ 62 ಸ್ಥಳಗಳಲ್ಲಿ ಭೂಕುಸಿತ ಸಂಭವಿಸಿದ್ದು, ಅಧಿಕಾರಿಗಳು ತೆರವು ಕಾರ್ಯಾಚರಣೆ ನಡೆಸಿದ್ದಾರೆ. ರಸ್ತೆಗೆ ಬಂಡೆಕಲ್ಲು ಉರುಳಿಬಿದ್ದು ಬಸ್ ಚಾಲಕರೊಬ್ಬರು ಮೃತಪಟ್ಟಿದ್ದಾರೆ. ಅವರ ಕುಟುಂಬಕ್ಕೂ ₹4 ಲಕ್ಷ ಪರಿಹಾರ ಘೋಷಿಸಲಾಗಿದೆ.
ಮಳೆ ಮತ್ತು ಭೂಕುಸಿತದ ಅಪಾಯದ ಹಿನ್ನೆಲೆಯಲ್ಲಿ ಊಟಿ, ಕೊಡೈಕೆನಾಲ್ ಮತ್ತು ಯೆರ್ಕಾಡ್ ಗಿರಿಧಾಮಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ. ಸ್ಥಳೀಯ ನಿವಾಸಿಗಳಿಗೆ ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಜಿಲ್ಲಾಧಿಕಾರಿಗಳ ಪಾಸ್ ಪಡೆದು ಸಂಚರಿಸಲು ಅವಕಾಶ ನೀಡಲಾಗಿದೆ.
ಮುಂದಿನ 48 ಗಂಟೆ ರೆಡ್ ಅಲರ್ಟ್:
ತಮಿಳುನಾಡಿನ ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ನದಿ ತೀರ ಮತ್ತು ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಎಚ್ಚರಿಕೆಯಿಂದ ಇರಬೇಕು ಹಾಗೂ ಅನಗತ್ಯವಾಗಿ ಮನೆಯಿಂದ ಹೊರಬರಬಾರದು ಎಂದು ಸರ್ಕಾರ ಸೂಚಿಸಿದೆ.










