ತುಮಕೂರು: ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಯುವತಿಯರು ಮೃತಪಟ್ಟಿದ್ದು, ಐವರಿಗೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ತಾವರೆಕೆರೆ ಬಳಿ ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ.
ಮೃತರನ್ನು ನಿಸರ್ಗ (20) ಮತ್ತು ರೂಪಾ (21) ಎಂದು ಗುರುತಿಸಲಾಗಿದೆ. ಇಬ್ಬರೂ ಬಿ-ಫಾರ್ಮಾ ಪದವಿ ಪೂರ್ಣಗೊಳಿಸಿದ್ದು, ಉದ್ಯೋಗ ಸಂದರ್ಶನದಲ್ಲಿ ಭಾಗವಹಿಸಲು ಬೆಂಗಳೂರಿಗೆ ತೆರಳುತ್ತಿದ್ದರು ಎನ್ನಲಾಗಿದೆ.
ಡಿವೈಡರ್ ದಾಟಿ ಮತ್ತೊಂದು ಕಾರಿಗೆ ಡಿಕ್ಕಿ:
ಬಿಜಾಪುರದಿಂದ ಬೆಂಗಳೂರಿನತ್ತ ಡಿಸೈರ್ ಕಾರಿನಲ್ಲಿ ಮೂವರು ಯುವತಿಯರು ಹಾಗೂ ಚಾಲಕ ಪವನ್ ಪ್ರಯಾಣಿಸುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಮೊದಲು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಡಿವೈಡರ್ ದಾಟಿ ಎದುರಿನಿಂದ ಬರುತ್ತಿದ್ದ ಟಾಟಾ ಕಾರಿಗೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ.
ಅಪಘಾತದ ತೀವ್ರತೆಗೆ ನಿಸರ್ಗ ಮತ್ತು ರೂಪಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರ ಜೊತೆಗಿದ್ದ ಮತ್ತೊಬ್ಬ ಯುವತಿ ಹಾಗೂ ಚಾಲಕ ಪವನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಟಾಟಾ ಕಾರಿನಲ್ಲಿದ್ದ ನಾಲ್ವರೂ ಗಾಯಗೊಂಡಿದ್ದಾರೆ.
ಜಿಲ್ಲಾಸ್ಪತ್ರೆಗೆ ಗಾಯಾಳುಗಳ ರವಾನೆ:
ಅಪಘಾತದಲ್ಲಿ ಗಾಯಗೊಂಡ ಎಲ್ಲರನ್ನೂ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಶಿರಾ ಡಿವೈಎಸ್ಪಿ ಹಾಗೂ ಶಿರಾ ಗ್ರಾಮಾಂತರ ಸಿಪಿಐ ಸೇರಿದಂತೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಉದ್ಯೋಗದ ಕನಸು ಹೊತ್ತು ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಇಬ್ಬರು ಯುವತಿಯರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವುದು ದುರಂತಕ್ಕೆ ಕಾರಣವಾಗಿದೆ.









