ನವದೆಹಲಿ: ರೈಲು ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ರೈಲ್ವೆ ಮಂಡಳಿ ಮಹತ್ವದ ನಿರ್ದೇಶನ ನೀಡಿದೆ.
ರಾತ್ರಿ 11 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ರೈಲುಗಳಲ್ಲಿರುವ ಮೊಬೈಲ್ ಚಾರ್ಜಿಂಗ್ ಪಾಯಿಂಟ್ಗಳನ್ನು ಸ್ವಿಚ್ ಆಫ್ ಮಾಡುವಂತೆ ಎಲ್ಲ ರೈಲ್ವೆ ವಲಯಗಳಿಗೂ ಸೂಚಿಸಲಾಗಿದೆ. ರೈಲುಗಳಲ್ಲಿ ಬೆಂಕಿ ಅವಘಡ ಸಂಭವಿಸುವ ಅಪಾಯವನ್ನು ತಡೆಯುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.
ಚಾರ್ಜಿಂಗ್ ಪಾಯಿಂಟ್ಗಳನ್ನು ಬಂದ್ ಮಾಡಲು ಕಾರಣವೇನು?
ಇತ್ತೀಚೆಗೆ ಮುಂಬೈ ಸ್ಥಳೀಯ ರೈಲಿನಲ್ಲಿ ಪ್ರಯಾಣಿಕರೊಬ್ಬರು ಮೊಬೈಲ್ ಚಾರ್ಜ್ ಮಾಡುತ್ತಿದ್ದ ವೇಳೆ ಪವರ್ ಬ್ಯಾಂಕ್ ಸ್ಫೋಟಗೊಂಡಿತ್ತು. ಇದರಿಂದ ಬೋಗಿಯೊಳಗೆ ದಟ್ಟ ಹೊಗೆ ಆವರಿಸಿಕೊಂಡಿತ್ತು. ಇಂತಹ ಘಟನೆಗಳು ರೈಲಿನಲ್ಲಿ ಬೆಂಕಿ ಅವಘಡಕ್ಕೆ ಕಾರಣವಾಗುವ ಸಾಧ್ಯತೆ ಇರುವುದರಿಂದ ರೈಲ್ವೆ ಇಲಾಖೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ.
ಅಕ್ಟೋಬರ್ 26ರಂದು ರೈಲ್ವೆ ಮಂಡಳಿಯು ಈ ಸಂಬಂಧ ಎಲ್ಲ ರೈಲ್ವೆ ವಲಯಗಳಿಗೂ ಪತ್ರದ ಮೂಲಕ ನಿರ್ದೇಶನ ನೀಡಿದೆ ಎನ್ನಲಾಗಿದೆ. ನಿಗದಿತ ಸಮಯದಲ್ಲಿ ಚಾರ್ಜಿಂಗ್ ಪಾಯಿಂಟ್ಗಳನ್ನು ಸ್ವಿಚ್ ಆಫ್ ಮಾಡುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ. ಈ ನಿಯಮದಲ್ಲಿ ಯಾವುದೇ ವಿನಾಯಿತಿ ಇರುವುದಿಲ್ಲ ಎಂದೂ ಮಂಡಳಿ ಸ್ಪಷ್ಟಪಡಿಸಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಅಧಿಕಾರಿಗಳಿಂದ ನಿರಂತರ ತಪಾಸಣೆಗೆ ಸೂಚನೆ:
ರಾತ್ರಿ 11ರಿಂದ ಬೆಳಗ್ಗೆ 5ರವರೆಗಿನ ಆರು ಗಂಟೆಗಳ ಅವಧಿಯಲ್ಲಿ ಎಲ್ಲ ರೈಲುಗಳ ಬೋಗಿಗಳಲ್ಲಿನ ಚಾರ್ಜಿಂಗ್ ಪಾಯಿಂಟ್ಗಳು ಸ್ವಿಚ್ ಆಫ್ ಆಗಿರುವುದನ್ನು ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು. ಈ ಸಂಬಂಧ ನಿರಂತರ ಮೇಲ್ವಿಚಾರಣೆ ನಡೆಸುವಂತೆಯೂ ಸೂಚಿಸಲಾಗಿದೆ.
ಅಲ್ಲದೆ, ರೈಲು ಬೋಗಿಗಳಲ್ಲಿ ಚಾರ್ಜಿಂಗ್ ಪಾಯಿಂಟ್ಗಳನ್ನು ನಿಗದಿತ ಸಮಯದಲ್ಲಿ ಬಂದ್ ಮಾಡಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಲು ಅಧಿಕಾರಿಗಳು ಮತ್ತು ಮೇಲ್ವಿಚಾರಕರು ಅನಿರೀಕ್ಷಿತ ತಪಾಸಣೆ ನಡೆಸಬೇಕು. ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಹಾಗೂ ಯಾವುದೇ ನಿರ್ಲಕ್ಷ್ಯಕ್ಕೆ ಅವಕಾಶ ನೀಡಬಾರದು ಎಂದು ಸೂಚಿಸಲಾಗಿದೆ.










