ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಹಗರಣ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು (SIT) ರಚಿಸಿ ಆದೇಶ ಹೊರಡಿಸಿದೆ. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ಸಮಗ್ರ ತನಿಖೆ ನಡೆಸಲು ಈ ತಂಡವನ್ನು ರಚಿಸಲಾಗಿದ್ದು, ಎಸ್ಐಟಿಗೆ ಪೊಲೀಸ್ ಠಾಣೆಯ ಸ್ಥಾನಮಾನವನ್ನೂ ನೀಡಲಾಗಿದೆ.
ಕೆಪಿಎಸ್ಸಿ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸುವ ವಿಚಾರದಲ್ಲಿ ವಿಳಂಬವಾಗಿರುವುದಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು. ಈ ಬೆಳವಣಿಗೆಯ ಬೆನ್ನಲ್ಲೇ ರಾಜ್ಯ ಸರ್ಕಾರ ಎಸ್ಐಟಿ ರಚನೆಗೆ ಅಧಿಕೃತ ಆದೇಶ ಹೊರಡಿಸಿದೆ.
ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ತನಿಖೆಯನ್ನು ಹೊಸದಾಗಿ ರಚಿಸಲಾದ ವಿಶೇಷ ತನಿಖಾ ತಂಡ ಕೈಗೆತ್ತಿಕೊಳ್ಳಲಿದೆ. ತನಿಖಾ ಪ್ರಕ್ರಿಯೆಯನ್ನು ಕಾನೂನುಬದ್ಧವಾಗಿ ಮುಂದುವರಿಸಲು ಎಸ್ಐಟಿಗೆ ಪೊಲೀಸ್ ಠಾಣೆಯ ಸ್ಥಾನಮಾನ ನೀಡಲಾಗಿದೆ.
ಇನ್ನು ಎಸ್ಐಟಿ ಮುಖ್ಯಸ್ಥರ ನೇಮಕದ ವಿಚಾರದಲ್ಲಿಯೂ ಮಹತ್ವದ ಬೆಳವಣಿಗೆ ನಿರೀಕ್ಷಿಸಲಾಗಿದೆ. ಸೋಮವಾರ ಹೈಕೋರ್ಟ್ ಎಸ್ಐಟಿ ಮುಖ್ಯಸ್ಥರನ್ನು ನೇಮಿಸಲಿದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯದ ಮುಂದಿನ ಆದೇಶ ಮಹತ್ವ ಪಡೆದುಕೊಂಡಿದೆ.







