ಬೀದರ್: ಮುಂಬರುವ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳಲ್ಲಿ ಹೊಸ ಎಸ್ಐಆರ್ (SIR) ಮತದಾರರ ಪಟ್ಟಿಯನ್ನು ಬಳಸುವ ಬದಲು ಹಳೆಯ ಮತದಾರರ ಪಟ್ಟಿಯ ಆಧಾರದ ಮೇಲೆಯೇ ಚುನಾವಣೆ ನಡೆಸುವ ಸಾಧ್ಯತೆಯಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ರಾಜ್ಯದಲ್ಲಿ ಸಿದ್ಧವಾಗಿರುವ ಹೊಸ ಎಸ್ಐಆರ್ ಮತದಾರರ ಪಟ್ಟಿ ಇನ್ನೂ ಅಧಿಕೃತವಾಗಿ ಸರ್ಕಾರದ ಕೈ ಸೇರಿಲ್ಲ. ಇದರ ನಡುವೆ ಪರಿಷ್ಕೃತ ಪಟ್ಟಿಯಿಂದ ಸಾವಿರಾರು ಅರ್ಹ ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಹೊಸ ಮತದಾರರ ಪಟ್ಟಿ ಬಳಕೆಯ ಕುರಿತು ಗೊಂದಲಗಳು ಉಂಟಾಗಿವೆ ಎಂದು ಸಚಿವರು ತಿಳಿಸಿದ್ದಾರೆ.
ಸಿಎಂ, ಸಂಪುಟ ಸಭೆಯಲ್ಲಿ ಅಂತಿಮ ನಿರ್ಧಾರ
ಈ ವಿಚಾರವನ್ನು ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ಹಳೆಯ ಮತ್ತು ಹೊಸ ಮತದಾರರ ಪಟ್ಟಿಯ ದತ್ತಾಂಶಗಳನ್ನು ಕೂಲಂಕಷವಾಗಿ ಪರಿಶೀಲಿಸಲಾಗುವುದು ಎಂದಿದ್ದಾರೆ.
ಜನವರಿಯಲ್ಲಿ ಚುನಾವಣೆ ನಡೆಸಲು ಸರ್ಕಾರ ಸಿದ್ಧತೆ
ಯಾವುದೇ ಅರ್ಹ ಮತದಾರರಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಲಾಗುವುದು. ಹಳೆಯ ಮತದಾರರ ಪಟ್ಟಿಯನ್ನೇ ಆಧಾರವಾಗಿಟ್ಟುಕೊಂಡು ಮುಂದಿನ ಜನವರಿ ತಿಂಗಳಲ್ಲಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳನ್ನು ನಡೆಸಲು ಸರ್ಕಾರ ಬದ್ಧವಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.









