ಬೆಂಗಳೂರು: ರಾಜ್ಯಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿರುವ ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ವಿಶೇಷ ತನಿಖಾ ತಂಡವನ್ನು (SIT) ರಚಿಸಿ ಮಹತ್ವದ ಆದೇಶ ಹೊರಡಿಸಿದೆ. ಹಿರಿಯ ಐಪಿಎಸ್ ಅಧಿಕಾರಿಗಳಾದ ಆರ್. ಹಿತೇಂದ್ರ ಹಾಗೂ ಸೌಮೇಂದು ಮುಖರ್ಜಿ ಅವರ ನೇತೃತ್ವದಲ್ಲಿ ಎಸ್ಐಟಿ ರಚಿಸಲು ನ್ಯಾಯಾಲಯ ಸೂಚಿಸಿದೆ.
ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಈ ಹಿಂದೆ ಪ್ರಕರಣದ ತನಿಖೆ ನಡೆಸುತ್ತಿದ್ದ ಅಧಿಕಾರಿಗಳ ಬಗ್ಗೆ ಅರ್ಜಿದಾರರ ಪರ ವಕೀಲ ಗಿರೀಶ್ ಭಾರದ್ವಾಜ್ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ತನಿಖೆಯ ಮೇಲ್ವಿಚಾರಣೆ ಹಾಗೂ ವಿಶ್ವಾಸಾರ್ಹತೆ ದೃಷ್ಟಿಯಿಂದ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಹೊಸ ತಂಡ ರಚಿಸಲು ನ್ಯಾಯಾಲಯ ನಿರ್ಧರಿಸಿದೆ.
CID ಅಧಿಕಾರಿಗಳಿಗೆ ಎಸ್ಐಟಿಯಲ್ಲಿ ಅವಕಾಶವಿಲ್ಲ
ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮದ ಸಮಗ್ರ ತನಿಖೆ ನಡೆಸಲು ಆರ್. ಹಿತೇಂದ್ರ ಮತ್ತು ಸೌಮೇಂದು ಮುಖರ್ಜಿ ಅವರ ನೇತೃತ್ವದಲ್ಲಿ ಎಸ್ಐಟಿ ಕಾರ್ಯನಿರ್ವಹಿಸಲಿದೆ. ಈ ಹಿಂದೆ ಪ್ರಕರಣದ ತನಿಖೆ ನಡೆಸುತ್ತಿದ್ದ ಸಿಐಡಿ ಅಧಿಕಾರಿಗಳನ್ನು ಹೊಸ ಎಸ್ಐಟಿಯಲ್ಲಿ ಮುಂದುವರಿಸಬಾರದು ಎಂದು ಹೈಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದೆ.
ಯಾರ ಒತ್ತಡ ಅಥವಾ ಪ್ರಭಾವಕ್ಕೂ ಒಳಗಾಗದೆ, ಸಂಪೂರ್ಣ ಸ್ವತಂತ್ರವಾಗಿ ತನಿಖೆ ನಡೆಸಬೇಕು. ತನಿಖೆಯ ಮೇಲೆ ಸಾರ್ವಜನಿಕರಲ್ಲಿ ವಿಶ್ವಾಸ ಮೂಡುವ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ನ್ಯಾಯಾಲಯ ಸೂಚಿಸಿದೆ.
ಅಗತ್ಯ ಸಿಬ್ಬಂದಿ, ಮೂಲಸೌಕರ್ಯ ಒದಗಿಸಲು ಸರ್ಕಾರಕ್ಕೆ ಸೂಚನೆ
ಎಸ್ಐಟಿ ತನಿಖೆಗೆ ಅಗತ್ಯವೆಂದು ಗುರುತಿಸುವ ಸಿಬ್ಬಂದಿಯನ್ನು ರಾಜ್ಯ ಸರ್ಕಾರ ತಕ್ಷಣವೇ ನೇಮಿಸಬೇಕು. ಅಲ್ಲದೆ, ತನಿಖೆ ನಡೆಸಲು ಬೇಕಾದ ಎಲ್ಲ ಮೂಲಸೌಕರ್ಯಗಳನ್ನು ಸರ್ಕಾರವೇ ಒದಗಿಸಬೇಕು ಎಂದು ಹೈಕೋರ್ಟ್ ನಿರ್ದೇಶಿಸಿದೆ.
ED ಮತ್ತು ಎಸ್ಐಟಿ ಸಮನ್ವಯದಿಂದ ತನಿಖೆ ನಡೆಸಲು ಸೂಚನೆ
ಈ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ಜಾರಿ ನಿರ್ದೇಶನಾಲಯ (ED) ನಡೆಸುತ್ತಿದೆ. ಹೀಗಾಗಿ, ಇ.ಡಿ. ಮತ್ತು ನೂತನ ಎಸ್ಐಟಿ ಪರಸ್ಪರ ಪೂರಕವಾಗಿ ಹಾಗೂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ನ್ಯಾಯಾಲಯ ಸೂಚಿಸಿದೆ.
ಕೆಪಿಎಸ್ಸಿ ಮಾಜಿ ಅಧ್ಯಕ್ಷರೂ ಜೈಲು ಸೇರಿರುವ ಬಹುಕೋಟಿ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಹೈಕೋರ್ಟ್ ಮಧ್ಯಪ್ರವೇಶಿಸಿ ಹಿರಿಯ ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ ಎಸ್ಐಟಿ ರಚಿಸಿರುವುದು ಮಹತ್ವದ ಬೆಳವಣಿಗೆಯಾಗಿದೆ. ಇದರಿಂದ ನೇಮಕಾತಿ ಹಗರಣದ ಸಂತ್ರಸ್ತ ಅಭ್ಯರ್ಥಿಗಳಲ್ಲಿ ನ್ಯಾಯಸಮ್ಮತ ತನಿಖೆಯ ನಿರೀಕ್ಷೆ ಹೆಚ್ಚಾಗಿದೆ.










