ಅಮರಾವತಿ: ಮುರಸು ಚಂಡಮಾರುತ ಆಂಧ್ರಪ್ರದೇಶದ ಕರಾವಳಿಗೆ ಅಪ್ಪಳಿಸಿದ್ದು, ಕರಾವಳಿ ಭಾಗದಲ್ಲಿ ಭಾರೀ ಮಳೆ ಹಾಗೂ ಬಿರುಗಾಳಿಯ ಆತಂಕ ಎದುರಾಗಿದೆ.
ಗಂಟೆಗೆ 100ರಿಂದ 120 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಭಾರತೀಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಮಂಗಳವಾರ ಬೆಳಗಿನ ಜಾವ ಸುಮಾರು 4 ಗಂಟೆಗೆ ಪ್ರಕಾಶಂ ಜಿಲ್ಲೆಯ ಒಂಗೋಲು ಸಮೀಪ ಮುರಸು ಚಂಡಮಾರುತ ಆಂಧ್ರ ಕರಾವಳಿಯನ್ನು ಪ್ರವೇಶಿಸಿದೆ. ಇದರ ಪ್ರಭಾವದಿಂದ ಕರಾವಳಿ ಭಾಗದಲ್ಲಿ ಗಂಟೆಗೆ 100ರಿಂದ 120 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಅಲ್ಲದೆ, ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಚಂಡಮಾರುತದ ಪರಿಣಾಮ ದಕ್ಷಿಣ ಆಂಧ್ರಪ್ರದೇಶದ ಹಲವು ಭಾಗಗಳಲ್ಲಿ ಈಗಾಗಲೇ ಮಳೆಯಾಗಿದೆ. ಸೋಮವಾರ (ನ.2) ತಡರಾತ್ರಿ ಆರಂಭವಾದ ಮಳೆ ಮಂಗಳವಾರ ಮುಂಜಾನೆಯವರೆಗೂ ಮುಂದುವರಿದಿದೆ. ಇದರಿಂದ ನಗರದ ಹಲವು ಪ್ರದೇಶಗಳಲ್ಲಿ ಮಳೆನೀರು ನಿಂತುಕೊಂಡಿದ್ದು, ವಾಹನ ಸವಾರರು ತೊಂದರೆ ಅನುಭವಿಸಿದ್ದಾರೆ.
ಹವಾಮಾನ ಇಲಾಖೆಯ ಪ್ರಕಾರ, ಮುಂದಿನ 12 ಗಂಟೆಗಳ ಕಾಲ ಆಂಧ್ರಪ್ರದೇಶದ ದಕ್ಷಿಣ ಕರಾವಳಿಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ತಗ್ಗು ಪ್ರದೇಶಗಳು ಜಲಾವೃತಗೊಳ್ಳುವ ಆತಂಕವಿದ್ದು, ಸಮುದ್ರದಲ್ಲಿ ಸುಮಾರು 1ರಿಂದ 1.5 ಮೀಟರ್ ಎತ್ತರದ ಚಂಡಮಾರುತದ ಅಲೆಗಳು ಏಳುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ.
ಇನ್ನು ಚಂಡಮಾರುತದ ಹಿನ್ನೆಲೆಯಲ್ಲಿ ಯಾವುದೇ ಜೀವಹಾನಿ ಸಂಭವಿಸದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪರಿಸ್ಥಿತಿಯ ಕುರಿತು ಮಾಹಿತಿ ಪಡೆದಿರುವ ಅವರು, ನೆಲ್ಲೂರು, ಪ್ರಕಾಶಂ ಹಾಗೂ ಕೋತಪಟ್ಟಣಂ ಕರಾವಳಿ ಪ್ರದೇಶಗಳಲ್ಲಿ ಮಳೆಯ ತೀವ್ರತೆ ಮತ್ತು ಗಾಳಿಯ ವೇಗದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು, ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ನಿರ್ದೇಶನ ನೀಡಿದ್ದಾರೆ.










