ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಸ್ಟಿಂಗ್ ಆಪರೇಷನ್ ಪ್ರಕರಣದ ಕುರಿತು ಮಾಜಿ ಸಚಿವ ಕೆ.ಎನ್. ರಾಜಣ್ಣ ಮತ್ತೊಮ್ಮೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಭಿವೃದ್ಧಿ ವಿಚಾರದಲ್ಲಿ ಗುಜರಾತ್ ಮಾಡೆಲ್ ಎಂದು ಹೇಳುವಂತೆ, ಮುಂದಿನ ದಿನಗಳಲ್ಲಿ ಸ್ಟಿಂಗ್ ಆಪರೇಷನ್ ವಿಚಾರದಲ್ಲಿ ಕರ್ನಾಟಕ ಮಾಡೆಲ್ ಎಂಬ ಅಪಕೀರ್ತಿ ಬರಬಹುದು. ಇದರಿಂದ ರಾಜ್ಯದ ಗೌರವಕ್ಕೆ ಧಕ್ಕೆಯಾಗಲಿದ್ದು, ಕನ್ನಡಿಗರು ತಲೆತಗ್ಗಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ರಾಜಣ್ಣ, ಸ್ಟಿಂಗ್ ಆಪರೇಷನ್ನಿಂದ ಪಕ್ಷದ ಮೇಲೆ ಉಂಟಾಗುತ್ತಿರುವ ಪರಿಣಾಮಗಳು ಹಾಗೂ ವೈಯಕ್ತಿಕ ವರ್ಚಸ್ಸಿಗೆ ಆಗುತ್ತಿರುವ ಹಾನಿಯ ಕುರಿತು ರಾಹುಲ್ ಗಾಂಧಿ ಅವರೊಂದಿಗೆ ಸಿದ್ದರಾಮಯ್ಯ ವಿವರವಾಗಿ ಚರ್ಚಿಸಿದ್ದಾರೆ ಎಂಬ ಮಾಹಿತಿ ಇದೆ ಎಂದು ತಿಳಿಸಿದರು.
ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಸೂಕ್ತ ತನಿಖೆ ನಡೆಸಿ ಸತ್ಯವನ್ನು ಹೊರತರಬೇಕು. ತನಿಖೆ ಉನ್ನತ ಮಟ್ಟದಲ್ಲಾಗಲಿ ಅಥವಾ ಕೆಳಮಟ್ಟದಲ್ಲಾಗಲಿ, ನಿಷ್ಪಕ್ಷಪಾತವಾಗಿ ನಡೆಯುವುದು ಮುಖ್ಯ. ಪ್ರಕರಣದಲ್ಲಿ ನಿರಪರಾಧಿಗಳನ್ನು ಸಿಲುಕಿಸುವ ಪ್ರಯತ್ನ ನಡೆದಿದ್ದರೆ ಅವರಿಗೆ ನ್ಯಾಯ ಸಿಗಬೇಕು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಜಣ್ಣ ಒತ್ತಾಯಿಸಿದರು.
ಅಭಿವೃದ್ಧಿಗೆ ಗುಜರಾತ್ ಮಾಡೆಲ್ ಎಂಬ ಹೆಸರು ಬಂದಿರುವಂತೆ, ಸ್ಟಿಂಗ್ ಆಪರೇಷನ್ ವಿಚಾರದಲ್ಲಿ ಕರ್ನಾಟಕ ಮಾಡೆಲ್ ಎಂಬ ಅಪಕೀರ್ತಿ ಬರಬಾರದು. ಇಂತಹ ಘಟನೆಗಳು ರಾಜ್ಯಕ್ಕೆ ಕಳಂಕ ತರುತ್ತವೆ. ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಇದೇ ವೇಳೆ ಸಿದ್ದರಾಮಯ್ಯ ಅವರ ರಾಜಕೀಯ ನಿಲುವುಗಳ ಬಗ್ಗೆಯೂ ರಾಜಣ್ಣ ಅಸಮಾಧಾನ ವ್ಯಕ್ತಪಡಿಸಿದರು. ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ ಬಳಿಕ ಚುನಾವಣಾ ಪ್ರಚಾರಕ್ಕೂ ಹೋಗುವುದಿಲ್ಲ ಎಂದು ಹೇಳಿರುವುದು ಪಕ್ಷದ ಮೇಲೆ ದುಷ್ಪರಿಣಾಮ ಬೀರಬಹುದು ಎಂದು ಅಭಿಪ್ರಾಯಪಟ್ಟರು.
ಸಿದ್ದರಾಮಯ್ಯ ಅವರ ಮುಂದಿನ ರಾಜಕೀಯ ನಡೆ ಕುರಿತು ಜನರಲ್ಲಿ ಗೊಂದಲವಿದೆ. ಈ ಹಿನ್ನೆಲೆಯಲ್ಲಿ 2028ರ ವಿಧಾನಸಭಾ ಚುನಾವಣೆಯ ನಾಯಕತ್ವದ ಬಗ್ಗೆ ಸ್ಪಷ್ಟತೆ ನೀಡುವುದು ಅಗತ್ಯವಾಗಿದೆ ಎಂದು ರಾಜಣ್ಣ ಹೇಳಿದರು.








