ಚಿಕ್ಕಮಗಳೂರು: ಚಂದ್ರದ್ರೋಣ ಪರ್ವತ ಶ್ರೇಣಿಯ ಬಿಂಡಿಗ ಮತ್ತು ಮಲ್ಲೇನಹಳ್ಳಿ ಗ್ರಾಮದ ಶಕ್ತಿದೇವತೆ ದೇವೀರಮ್ಮನ ಜಾತ್ರಾ ಮಹೋತ್ಸವಕ್ಕೆ ಜಿಲ್ಲಾಡಳಿತ ಈ ಬಾರಿ ಹಲವು ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಪ್ರತಿವರ್ಷ ಲಕ್ಷಾಂತರ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಭಕ್ತರ ಸುರಕ್ಷತೆ ಹಾಗೂ ಜನದಟ್ಟಣೆ ನಿಯಂತ್ರಣಕ್ಕೆ ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಸಮುದ್ರ ಮಟ್ಟದಿಂದ ಸುಮಾರು 3,800 ಅಡಿ ಎತ್ತರದಲ್ಲಿರುವ ದೇವೀರಮ್ಮನ ಬೆಟ್ಟಕ್ಕೆ ಕಿರಿದಾದ ಹಾಗೂ ದುರ್ಗಮ ಹಾದಿಯ ಮೂಲಕ ಸಾಗಬೇಕಿದೆ. ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುವ ಜಗನ್ಮಾತೆ ದೇವೀರಮ್ಮನ ದರ್ಶನ ಪಡೆಯಲು ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಆಗಮಿಸುತ್ತಾರೆ.
ಈ ಬಾರಿ ಭಕ್ತರಿಗೆ ಎರಡು ದಿನಗಳ ಕಾಲ ಮಾತ್ರ ಬೆಟ್ಟ ಹತ್ತಲು ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ. ನವೆಂಬರ್ 7ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಹಾಗೂ ನವೆಂಬರ್ 8ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಬೆಟ್ಟ ಹತ್ತಲು ಅನುಮತಿ ನೀಡಲಾಗಿದೆ.
ಭಕ್ತರ ಸುರಕ್ಷತೆಯ ದೃಷ್ಟಿಯಿಂದ 15 ವರ್ಷ ಮೇಲ್ಪಟ್ಟವರು ಹಾಗೂ 60 ವರ್ಷದೊಳಗಿನವರಿಗೆ ಮಾತ್ರ ಬೆಟ್ಟ ಹತ್ತಲು ಅವಕಾಶ ನೀಡಲಾಗಿದೆ. ಅಲ್ಲದೆ, ರಾತ್ರಿ ವೇಳೆ ಬೆಟ್ಟ ಹತ್ತುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಿಗದಿಪಡಿಸಿದ ಸಮಯದೊಳಗೆ ಮಾತ್ರ ಭಕ್ತರು ಬೆಟ್ಟ ಏರಬೇಕೆಂದು ಸೂಚಿಸಲಾಗಿದೆ.
ಈ ಬಾರಿಯ ದೇವೀರಮ್ಮ ಜಾತ್ರೆಗೆ ಒಂದು ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಹೀಗಾಗಿ ಜಿಲ್ಲಾಡಳಿತ ಈಗಾಗಲೇ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯ್ಮಾ ಹಾಗೂ ದೇವಸ್ಥಾನದ ಆಡಳಿತ ಮಂಡಳಿಯ ಅಧಿಕಾರಿಗಳು ಖುದ್ದಾಗಿ ಬೆಟ್ಟ ಏರಿ ಪರಿಶೀಲನೆ ನಡೆಸಿದ್ದಾರೆ.
ಜಾತ್ರೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಅಗ್ನಿಶಾಮಕ ದಳ, ಸಾವಿರಾರು ಪೊಲೀಸ್ ಸಿಬ್ಬಂದಿ, ಗೃಹರಕ್ಷಕ ದಳ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಯನ್ನು ನಿಯೋಜಿಸಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ. ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯ ಮತ್ತು ಭದ್ರತಾ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ.









