ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 13ರಂದು ಒಂದು ದಿನದ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಂಗಳೂರು ಹಾಗೂ ಮೈಸೂರಿನಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿರುವ ಪ್ರಧಾನಿ, ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಬೆಂಗಳೂರಿನಲ್ಲಿ ಮೆಟ್ರೋ ರೈಲು ಸಂಚಾರವನ್ನು ಉದ್ಘಾಟಿಸುವುದರ ಜೊತೆಗೆ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬಳಿಕ ಮೈಸೂರಿಗೆ ತೆರಳಿ ಪ್ರಮುಖ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಪ್ರಧಾನಿ ಮೋದಿ ಅವರು ನವೆಂಬರ್ 13ರಂದು ಬೆಳಗ್ಗೆ 7.20ಕ್ಕೆ ದೆಹಲಿಯಿಂದ ಭಾರತೀಯ ವಾಯುಪಡೆಯ ವಿಶೇಷ ವಿಮಾನದಲ್ಲಿ ಹೊರಡಲಿದ್ದಾರೆ. ಬೆಳಗ್ಗೆ 10.10ಕ್ಕೆ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಅಲ್ಲಿಂದ ಎಂಐ-17 ಹೆಲಿಕಾಪ್ಟರ್ ಮೂಲಕ ಕಾರ್ಯಕ್ರಮದ ಸ್ಥಳಕ್ಕೆ ತೆರಳಲಿದ್ದಾರೆ.
ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಹೆಲಿಪ್ಯಾಡ್-1ಕ್ಕೆ ಆಗಮಿಸಲಿರುವ ಪ್ರಧಾನಿ, ಅಲ್ಲಿಂದ ರಸ್ತೆ ಮಾರ್ಗವಾಗಿ ಪ್ರಯಾಣಿಸಿ 10.40ಕ್ಕೆ ಪ್ರಶಾಂತಿ ಕುಟೀರಂನ ಕಾರ್ಯಕ್ರಮದ ಸ್ಥಳ ತಲುಪಲಿದ್ದಾರೆ. ಬೆಳಗ್ಗೆ 10.45ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಪ್ರಶಾಂತಿ ಕುಟೀರಂನ ಸುವರ್ಣ ಮಹೋತ್ಸವ ಆಚರಣೆಯಲ್ಲಿ ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮ ಮುಗಿದ ಬಳಿಕ ಮಧ್ಯಾಹ್ನ 12 ಗಂಟೆಗೆ ಅಲ್ಲಿಂದ ನಿರ್ಗಮಿಸಿ, 12.05ಕ್ಕೆ ಹೆಲಿಪ್ಯಾಡ್-1ಕ್ಕೆ ಆಗಮಿಸಲಿದ್ದಾರೆ. ನಂತರ 12.10ಕ್ಕೆ ಹೆಲಿಕಾಪ್ಟರ್ ಮೂಲಕ ಹೊರಟು 12.30ಕ್ಕೆ ಬೆಂಗಳೂರಿನ ಹೆಲಿಪ್ಯಾಡ್-2ಕ್ಕೆ ತಲುಪಲಿದ್ದಾರೆ.
ಬಳಿಕ ರಸ್ತೆ ಮಾರ್ಗವಾಗಿ ತಾವರೆಕೆರೆ ಮೆಟ್ರೋ ನಿಲ್ದಾಣಕ್ಕೆ ತೆರಳಲಿರುವ ಪ್ರಧಾನಿ ಮೋದಿ, ಮಧ್ಯಾಹ್ನ 12.40ಕ್ಕೆ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಮಧ್ಯಾಹ್ನ 12.45ಕ್ಕೆ ಮೆಟ್ರೋ ರೈಲು ಸಂಚಾರಕ್ಕೆ ಚಾಲನೆ ನೀಡಲಿದ್ದು, ಬಳಿಕ ಸ್ವತಃ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಲಿದ್ದಾರೆ. ಮಧ್ಯಾಹ್ನ 1.05ಕ್ಕೆ ಐಐಎಂ ಬೆಂಗಳೂರು ಮೆಟ್ರೋ ನಿಲ್ದಾಣದಿಂದ ನಿರ್ಗಮಿಸಲಿದ್ದಾರೆ.
ಮೆಟ್ರೋ ಪ್ರಯಾಣದ ಬಳಿಕ ಮಧ್ಯಾಹ್ನ 1.10ಕ್ಕೆ ಐಐಎಂ ಬೆಂಗಳೂರು ಸಭಾಂಗಣಕ್ಕೆ ಆಗಮಿಸಲಿದ್ದಾರೆ. ಮಧ್ಯಾಹ್ನ 1.15ರಿಂದ 2.15ರವರೆಗೆ ನಡೆಯುವ ಕಾರ್ಯಕ್ರಮದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಲ್ಲದೆ, ಹಲವು ಯೋಜನೆಗಳನ್ನು ಉದ್ಘಾಟಿಸಿ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.
ಬೆಂಗಳೂರಿನ ಕಾರ್ಯಕ್ರಮಗಳನ್ನು ಮುಗಿಸಿದ ಬಳಿಕ ಮಧ್ಯಾಹ್ನ 2.20ಕ್ಕೆ ಪ್ರಧಾನಿ ಮೋದಿ ನಿರ್ಗಮಿಸಲಿದ್ದಾರೆ. 2.25ಕ್ಕೆ ಹೆಲಿಪ್ಯಾಡ್-2ಕ್ಕೆ ಆಗಮಿಸಿ, ಮಧ್ಯಾಹ್ನ 2.30ಕ್ಕೆ ಎಂಐ-17 ಹೆಲಿಕಾಪ್ಟರ್ ಮೂಲಕ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
ಮಧ್ಯಾಹ್ನ 3.20ಕ್ಕೆ ಮೈಸೂರಿನ ಹೆಲಿಪ್ಯಾಡ್‌ಗೆ ಆಗಮಿಸಲಿರುವ ಪ್ರಧಾನಿ, ಅಲ್ಲಿಂದ ರಸ್ತೆ ಮಾರ್ಗವಾಗಿ ಕೆ.ಸಿ. ಲೇಔಟ್ ಪಾರ್ಕ್‌ಗೆ ತೆರಳಲಿದ್ದಾರೆ. ಮಧ್ಯಾಹ್ನ 3.30ರಿಂದ 3.45ರವರೆಗೆ ನಡೆಯುವ ಭಾರತ್ ವನ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮದ ಬಳಿಕ ಮಧ್ಯಾಹ್ನ 3.50ಕ್ಕೆ ಅಲ್ಲಿಂದ ನಿರ್ಗಮಿಸಿ, 3.55ಕ್ಕೆ COSMOS ಮೈಸೂರು ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸಲಿದ್ದಾರೆ. ಸಂಜೆ 4 ಗಂಟೆಯಿಂದ 5.45ರವರೆಗೆ ನಡೆಯಲಿರುವ COSMOS ಮೈಸೂರು ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ.
ಮೈಸೂರಿನ ಕಾರ್ಯಕ್ರಮಗಳನ್ನು ಪೂರ್ಣಗೊಳಿಸಿದ ಬಳಿಕ ಸಂಜೆ 5.45ಕ್ಕೆ ಅಲ್ಲಿಂದ ನಿರ್ಗಮಿಸಲಿದ್ದಾರೆ. ಸಂಜೆ 6 ಗಂಟೆಗೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, 6.05ಕ್ಕೆ ಭಾರತೀಯ ವಾಯುಪಡೆಯ ವಿಶೇಷ ವಿಮಾನದ ಮೂಲಕ ದೆಹಲಿಗೆ ಪ್ರಯಾಣಿಸಲಿದ್ದಾರೆ. ರಾತ್ರಿ 8.55ಕ್ಕೆ ದೆಹಲಿ ವಿಮಾನ ನಿಲ್ದಾಣಕ್ಕೆ ತಲುಪುವ ವೇಳಾಪಟ್ಟಿ ನಿಗದಿಯಾಗಿದೆ.









