ಬೆಂಗಳೂರು: ಬೆಂಗಳೂರಿನ ಬಹುನಿರೀಕ್ಷಿತ ನಮ್ಮ ಮೆಟ್ರೋ ಪಿಂಕ್ ಲೈನ್ ನವೆಂಬರ್ 13ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಲೋಕಾರ್ಪಣೆಗೊಳ್ಳಲಿದೆ. ಆದರೆ ಅದೇ ದಿನ ಸಿಎ ವಿದ್ಯಾರ್ಥಿಗಳಿಗೆ ಪರೀಕ್ಷೆ ನಿಗದಿಯಾಗಿರುವ ಹಿನ್ನೆಲೆಯಲ್ಲಿ, ಪರೀಕ್ಷಾರ್ಥಿಗಳ ಸಂಚಾರಕ್ಕೆ ತೊಂದರೆಯಾಗದಂತೆ ವಿಶೇಷ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದ್ದಾರೆ.

ನವೆಂಬರ್ 13ರಂದು ಮಧ್ಯಾಹ್ನ 1 ಗಂಟೆಗೆ ಪಿಂಕ್ ಲೈನ್ ಉದ್ಘಾಟನಾ ಕಾರ್ಯಕ್ರಮ ನಿಗದಿಯಾಗಿದೆ. ಇದೇ ದಿನ ಮಧ್ಯಾಹ್ನ 2ರಿಂದ ಸಂಜೆ 6ರವರೆಗೆ ಸಿಎ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಉದ್ಘಾಟನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಂಚಾರ ನಿರ್ಬಂಧ ಅಥವಾ ವಾಹನ ದಟ್ಟಣೆ ಉಂಟಾದರೆ ಪರೀಕ್ಷಾ ಕೇಂದ್ರಗಳಿಗೆ ತೆರಳಲು ತೊಂದರೆಯಾಗಬಹುದು ಎಂಬ ಆತಂಕ ವಿದ್ಯಾರ್ಥಿಗಳಲ್ಲಿ ವ್ಯಕ್ತವಾಗಿದೆ.
ಪರೀಕ್ಷಾರ್ಥಿಗಳಿಗೆ ತೊಂದರೆಯಾಗದಂತೆ ಪೊಲೀಸರಿಗೆ ಸೂಚನೆ
ಈ ಕುರಿತು ಪ್ರತಿಕ್ರಿಯಿಸಿರುವ ಸಚಿವ ಕೃಷ್ಣ ಬೈರೇಗೌಡ, ಪ್ರಧಾನಿ ಕಚೇರಿ ನೀಡಿರುವ ವೇಳಾಪಟ್ಟಿಯ ಪ್ರಕಾರವೇ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ. ಪ್ರಧಾನಿ ಕಾರ್ಯಾಲಯವೇ ಸಮಯ ನಿಗದಿಪಡಿಸಿರುವುದರಿಂದ ಕಾರ್ಯಕ್ರಮದ ವೇಳಾಪಟ್ಟಿ ಬದಲಿಸುವುದು ಕಷ್ಟ ಎಂದು ಹೇಳಿದ್ದಾರೆ.
ಆದರೆ ಪರೀಕ್ಷಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗುವುದು. ಪರೀಕ್ಷಾ ಕೇಂದ್ರಗಳಿಗೆ ತೆರಳಲು ಪರ್ಯಾಯ ಮಾರ್ಗಗಳ ವ್ಯವಸ್ಥೆ ಕುರಿತು ಪೊಲೀಸ್ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತೆರಳಲು ತೊಂದರೆಯಾಗುವ ಪರಿಸ್ಥಿತಿ ಎದುರಾದರೆ, ಈ ವಿಚಾರವನ್ನು ಪ್ರಧಾನಿ ಕಚೇರಿಯ ಗಮನಕ್ಕೆ ತಂದು ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.
ಮೊದಲ ಹಂತದಲ್ಲಿ 7.5 ಕಿ.ಮೀ. ಮಾರ್ಗ ಸಂಚಾರಕ್ಕೆ ಮುಕ್ತ
ಪಿಂಕ್ ಲೈನ್ನ ಮೊದಲ ಹಂತದಲ್ಲಿ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗೆ ಸುಮಾರು 7.5 ಕಿ.ಮೀ. ಉದ್ದದ ಎಲಿವೇಟೆಡ್ ಕಾರಿಡಾರ್ನಲ್ಲಿ ಸಾರ್ವಜನಿಕರ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುತ್ತದೆ.
ಇದೇ ವೇಳೆ ಮೆಟ್ರೋ ಯೋಜನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ದೊರೆಯುತ್ತಿರುವ ಅನುದಾನದ ಬಗ್ಗೆಯೂ ಸಚಿವರು ಮಾತನಾಡಿದ್ದಾರೆ. ಸದ್ಯಕ್ಕೆ ಮೆಟ್ರೋ ಟಿಕೆಟ್ ದರಗಳ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.









