ಬೆಂಗಳೂರು: ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಮಹಿಳಾ ಮೆಕ್ಯಾನಿಕ್ ಮೇಲೆ ವ್ಯಕ್ತಿಯೊಬ್ಬ ಏಕಾಏಕಿ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ನಡೆದಿದೆ. ಹಳೆಯ ಪ್ರಕರಣವೊಂದರಲ್ಲಿ ತನ್ನ ವಿರುದ್ಧ ಸಾಕ್ಷಿ ಹೇಳಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಈ ಕೃತ್ಯ ಎಸಗಿದ್ದಾನೆ ಎನ್ನುವ ಆರೋಪ ಕೇಳಿಬಂದಿದೆ.

ನೆಲಮಂಗಲ ನಗರದ ಅರಿಶಿನಕುಂಟೆ ಬಳಿಯ ಕೆಎಸ್ಆರ್ಟಿಸಿ ಡಿಪೋದಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿರುವ 40 ವರ್ಷದ ಲಕ್ಷ್ಮಿ ಹಲ್ಲೆಗೊಳಗಾದವರು. ನಿನ್ನೆ ರಾತ್ರಿ ಸುಮಾರು 8:30ರ ವೇಳೆಗೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.
ಅಮಾನತುಗೊಂಡ ಸಹೋದ್ಯೋಗಿಯಿಂದ ಹಲ್ಲೆ ಆರೋಪ
ಲಕ್ಷ್ಮಿ ಅವರು ಡಿಪೋದಿಂದ ಹೊರಟಿದ್ದ ವೇಳೆ ಅಲ್ಲಿಗೆ ಬಂದ ಅಮಾನತುಗೊಂಡಿರುವ ಸಹೋದ್ಯೋಗಿ ಶಿವರಾಜ್ ಎಂಬಾತ ಏಕಾಏಕಿ ಚಾಕುವಿನಿಂದ ಇರಿದು ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.
ಹಳೆಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಲಕ್ಷ್ಮಿ ಅವರು ಶಿವರಾಜ್ ವಿರುದ್ಧ ಸಾಕ್ಷಿ ಹೇಳಿದ್ದರು ಎನ್ನಲಾಗಿದೆ. ಇದೇ ವಿಚಾರವಾಗಿ ದ್ವೇಷ ಹೊಂದಿದ್ದ ಶಿವರಾಜ್ ಹಲ್ಲೆ ನಡೆಸಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಆರೋಪಿ ಕಳೆದ ಕೆಲವು ತಿಂಗಳುಗಳಿಂದ ಕರ್ತವ್ಯದಿಂದ ಅಮಾನತುಗೊಂಡಿದ್ದ ಎನ್ನಲಾಗಿದೆ.
ಆಸ್ಪತ್ರೆಗೆ ದಾಖಲು, ಆರೋಪಿಗಾಗಿ ಪೊಲೀಸರ ಹುಡುಕಾಟ
ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡ ಲಕ್ಷ್ಮಿ ಅವರನ್ನು ಸ್ಥಳೀಯರು ಹಾಗೂ ಡಿಪೋ ಸಿಬ್ಬಂದಿ ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಅವರಿಗೆ ಚಿಕಿತ್ಸೆ ಮುಂದುವರಿದಿದೆ.
ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆ ನಡೆಸಿ ಪರಾರಿಯಾಗಿರುವ ಆರೋಪಿ ಶಿವರಾಜ್ ಪತ್ತೆಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.









