ನವದೆಹಲಿ: 2023ರ ಸಂಸತ್ ಭದ್ರತಾ ಲೋಪ ಪ್ರಕರಣದಲ್ಲಿ ಆರೋಪಿಗಳಾಗಿರುವ ಸಾಗರ್ ಶರ್ಮಾ ಮತ್ತು ಮನೋರಂಜನ್ ಡಿ ಅವರಿಗೆ ಜಾಮೀನು ನೀಡಲು ದೆಹಲಿ ನ್ಯಾಯಾಲಯ ನಿರಾಕರಿಸಿದೆ. ಇಬ್ಬರೂ ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ತಿರಸ್ಕರಿಸಿದೆ.

ವಿಚಾರಣೆ ವೇಳೆ ಆರೋಪಿಗಳ ವಿರುದ್ಧದ ಆರೋಪಗಳು ಮೇಲ್ನೋಟಕ್ಕೆ ಸತ್ಯವೆಂದು ನಂಬಲು ಸಮಂಜಸವಾದ ಆಧಾರಗಳಿವೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಅಲ್ಲದೆ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಜಾಮೀನು ಮಂಜೂರು ಮಾಡಲು ಇರುವ ಕಾನೂನು ನಿರ್ಬಂಧಗಳು ಈ ಪ್ರಕರಣಕ್ಕೂ ಅನ್ವಯಿಸುತ್ತವೆ ಎಂದು ತಿಳಿಸಿದೆ.
ಆರೋಪಿಗಳ ವಿರುದ್ಧದ ಆರೋಪಗಳು ಅತ್ಯಂತ ಗಂಭೀರ ಹಾಗೂ ಸೂಕ್ಷ್ಮ ಸ್ವರೂಪದ್ದಾಗಿವೆ ಎಂದು ನ್ಯಾಯಾಲಯ ಗಮನಿಸಿದೆ. ಅವರ ಕೃತ್ಯಗಳಿಂದ ಸಂಸತ್ತಿನ ಕಲಾಪಗಳಿಗೆ ಅಡ್ಡಿಯುಂಟಾಗಿದ್ದು, ಲೋಕಸಭೆಯೊಳಗಿದ್ದವರಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು ಎಂದು ಅಭಿಪ್ರಾಯಪಟ್ಟಿದೆ.
ಪ್ರಾಸಿಕ್ಯೂಷನ್ ಮಂಡಿಸಿದ ಪ್ರಾಥಮಿಕ ಸಾಕ್ಷ್ಯಗಳು ಮತ್ತು ಆರೋಪಗಳನ್ನು ಪರಿಗಣಿಸಿದ ನ್ಯಾಯಾಲಯ, ಆರೋಪಿಗಳ ಕೃತ್ಯಗಳು ಭಾರತದ ಸಾರ್ವಭೌಮತ್ವ ಹಾಗೂ ಸಮಗ್ರತೆಗೆ ಬೆದರಿಕೆ ಒಡ್ಡಿವೆ ಎಂಬ ಅಂಶವನ್ನೂ ಉಲ್ಲೇಖಿಸಿದೆ. ಈ ಎಲ್ಲ ಅಂಶಗಳನ್ನು ಆಧರಿಸಿ ಸಾಗರ್ ಶರ್ಮಾ ಮತ್ತು ಮನೋರಂಜನ್ ಡಿ ಅವರ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದೆ.









