ಬೆಳಗಾವಿ: ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ಕು ವರ್ಷದ ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮಾಲದಿನ್ನಿ ಕ್ರಾಸ್ ಬಳಿ ನಡೆದಿದೆ.

ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಪುಣೆಯಿಂದ ಸವದತ್ತಿ ಕಡೆಗೆ ಕುಟುಂಬವೊಂದು ಕಾರಿನಲ್ಲಿ ಪ್ರಯಾಣಿಸುತ್ತಿತ್ತು. ಈ ವೇಳೆ ಮಾಲದಿನ್ನಿ ಕ್ರಾಸ್ ಬಳಿ ಲಾರಿ ಹಾಗೂ ಕಾರಿನ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ಓಂಕಾರ ಮಾಂಡ್ರಿ (26), ರೇಷ್ಮಾ ಶ್ರೀಕಾಂತ ಮಾಂಡ್ರಿ (32) ಹಾಗೂ ನಾಲ್ಕು ವರ್ಷದ ದೇವಾಂಶ ಶ್ರೀಕಾಂತ ಮಾಂಡ್ರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇದೇ ಅಪಘಾತದಲ್ಲಿ ಶ್ರೀಕಾಂತ, ವಂದನಾ ಹಾಗೂ ಹರ್ಷದ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ನಡೆದ ತಕ್ಷಣ ಸ್ಥಳೀಯರು ಗಾಯಾಳುಗಳನ್ನು ಕಾರಿನಿಂದ ಹೊರತೆಗೆದು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚುತ್ತಿದ್ದಾರೆ. ಗೋಕಾಕ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.









